ಕೋವಿಡ್ ನಿರ್ವಹಣೆಯಲ್ಲಿ ಉದಾಸೀನ ಮಾಡಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ; ಸಚಿವ ಸುಧಾಕರ್ ಎಚ್ಚರಿಕೆ

ದೇವನಹಳ್ಳಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಬುಧವಾರ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಭಾಗವಹಿಸಿದ್ದರು.
ಸಭೆಯಲ್ಲಿ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಲಸಿಕೆ ಹಾಕಿಸಿಕೊಳ್ಳಲು ಜನ ಎಷ್ಟು ಬಾರಿ ಆರೋಗ್ಯ ಕೇಂದ್ರಗಳಿಗೆ ಅಲೆದಾಡಬೇಕು. ಲಸಿಕೆ ಹಾಕಿಸಿಕೊಳ್ಳಲು ನಾಲ್ಕೈದು ಬಾರಿ ಬಂದು ಹೋದರೂ ಜನರಿಗೆ ಲಸಿಕೆ ಸಿಗುತ್ತಿಲ್ಲ. ಇದರಿಂದ ಜನರಿಗೆ ಲಸಿಕೆ ಹಾಕಿಸಿಕೊಳ್ಳಲು ನಿರಾಸಕ್ತಿ ಉಂಟಾಗುತ್ತದೆ
ಈ ಸಮಸ್ಯೆಯನ್ನು ಯಾವಾಗ ಬಗೆಹರಿಸುತ್ತೀರಿ ಎಂದು ಪ್ರಶ್ನಿಸಿದರು ಅದಕ್ಕೆ ಆರೋಗ್ಯ ಸಚಿವ ಸುಧಾಕರ್ ಅವರು ಅಧಿಕಾರಿಗಳಿಗೆ ಈ ಬಗ್ಗೆ ಪರಿಶೀಲಿಸಿ ಎಲ್ಲರಿಗೂ ಲಸಿಕೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಕೋವಿಡ್ ನಿರ್ವಹಣೆಯ ಬಗ್ಗೆ ಕೇಳಿದ ಮಾಹಿತಿಯನ್ನು ಸಮರ್ಪಕವಾಗಿ ನೀಡದ ಮತ್ತು ಹೋಂ ಐಸೋಲೇಷನ್ ಗೆ ಅಧಿಕಾರಿಯನ್ನು ನೇಮಿಸದ ಜಿಲ್ಲಾ ವೈದ್ಯಾಧಿಕಾರಿ ತಿಪ್ಪೇಸ್ವಾಮಿ ಅವರನ್ನು ಸಚಿವ ಸುಧಾಕರ್ ತರಾಟೆಗೆ ತೆಗೆದುಕೊಂಡರು. ಮುಂದಿನ ದಿನಗಳಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಉದಾಸೀನ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ನಿಗದಿಯಾದ ತಕ್ಷಣವೇ ಇಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣ ಆಗಲಿದೆ. ಅದು ಶೀಘ್ರದಲ್ಲೇ ನಡೆಯಲಿದೆ. ರಾಜ್ಯದಲ್ಲಿ ಕೋವಿಡ್ನಿಂದ ಗುಣಮುಖರಾದ 28 ಲಕ್ಷ ಮಂದಿಗೆ ಕ್ಷಯ ತಪಾಸಣೆ ನಡೆಯಲಿದೆ. ಮೂರನೇ ಅಲೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸೇರಿದಂತೆ ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ಯಾರೂ ನಡೆಸುವಂತಿಲ್ಲ. ಅಂತಹ ಕಾರ್ಯಕ್ರಮಗಳು ನಡೆದರೆ ಆಯೋಜಕರ ಮೇಲೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ ಎಂದು ಸುಧಾಕರ್ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರುಗಳು ಸಭೆಯಲ್ಲಿ ಅಕ್ಕಪಕ್ಕದಲ್ಲೇ ಕುಳಿತಿದ್ದರೂ ಪರಸ್ಪರ ಮಾತನಾಡಲಿಲ್ಲ. ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದ ಮಾಧ್ಯಮಗಳ ಪ್ರಶ್ನೆಗೆ ಎಂಟಿಬಿ ನಾಗರಾಜ್ ಯಾವುದೇ ಉತ್ತರ ನೀಡಲಿಲ್ಲ.




