ಡಿ.24ರಂದು ತಲಕಾವೇರಿಗೆ ಡಿಕೆ ಶಿವಕುಮಾರ್ ಭೇಟಿ; ವಿಶೇಷ ಪೂಜೆ

ಕೊಡಗು : ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಅನೇಕ ನಾಯಕರು ಡಿ.24 ರಂದು ಕೊಡಗು ಜಿಲ್ಲೆಗೆ ಆಗಮಿಸಲಿದ್ದು, ಮೇಕೆದಾಟು ಯೋಜನೆಯ ಯಶಸ್ಸಿಗಾಗಿ ಕಾವೇರಿಯ ಉಗಮ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ನಂತರ ಮಡಿಕೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಡಿಕೆಶಿ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು-ಕೋಲಾರ ಜಿಲ್ಲೆಯ ಮೇಕೆದಾಟು ಯೋಜನೆ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಎಂದು ಕಾಂಗ್ರೆಸ್ ಮುಖಂಡರು ಪ್ರಾರ್ಥಿಸಲಿದ್ದಾರೆ ಎಂದು ತಿಳಿಸಿದರು.
ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷ ಕೊಡಗಿನಲ್ಲಿ ಪ್ರಬಲವಾಗಿ ಬೆಳವಣಿಗೆಯನ್ನು ಕಾಣುತ್ತಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತಮ ಪೈಪೋಟಿ ನೀಡಿದೆ. ಇದೀಗ ಡಿ.ಕೆ.ಶಿವಕುಮಾರ್ ಅವರ ಆಗಮನ ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ತುಂಬಲಿದೆ ಎಂದರು. ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂದು ಹೇಳಿದರು.
