ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಗಿಫ್ಟ್ : ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರಕಾರ ಸಂಕ್ರಾಂತಿಗೆ ಸಿಹಿಸುದ್ದಿ ಕೊಟ್ಟಿದ್ದು, ವೇತನವನ್ನು ದುಪ್ಪಟ್ಟಿಗಿಂತಲೂ ಹೆಚ್ಚು ಏರಿಸಿದೆ.
ಸರಕಾರದ ಪರವಾಗಿ ವಿಧಾನಸೌಧದಲ್ಲಿ ಶುಕ್ರವಾರ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ, ಇದಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ ಗೌರವಧನ ಪಡೆಯಲಿದ್ದಾರೆ ಎಂದು ಪ್ರಕಟಿಸಿದರು.
ಹಾಗೆಯೇ, ಯುಜಿಸಿ ಬಯಸುವ ಶೈಕ್ಷಣಿಕ ಅರ್ಹತೆ ಹೊಂದದೆ 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 28 ಸಾವಿರ ರೂ. ಮತ್ತು ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 26 ಸಾವಿರ ರೂ. ಗೌರವಧನ ನಿಗದಿಪಡಿಸಲಾಗಿದೆ. ಜತೆಗೆ, ಇವರು ನಿಗದಿತ ಶೈಕ್ಷಣಿಕ ಅರ್ಹತೆ ಗಳಿಸಿಕೊಳ್ಳಲು 3 ವರ್ಷಗಳ ಕಾಲಾವಕಾಶ ನೀಡಲಾಗಿದೆ. ಅತಿಥಿ ಉಪನ್ಯಾಸಕರಿಗೆಲ್ಲ ಇನ್ನು ಮುಂದೆ ಪ್ರತೀ ತಿಂಗಳು 10ರೊಳಗೆ ವೇತನ ಪಾವತಿಸಲಾಗುವುದು ಎಂದು ಅವರು ವಿವರಿಸಿದರು.
ಇದುವರೆಗೆ, ಯುಜಿಸಿ ನಿಗದಿತ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರು ತಿಂಗಳಿಗೆ 13 ಸಾವಿರ ರೂ. ಮತ್ತು ಮಿಕ್ಕವರು 11 ಸಾವಿರ ರೂ. ಗೌರವಧನ ಪಡೆಯುತ್ತಿದ್ದರು.
ಇದಲ್ಲದೆ, ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್-ಲೈನ್ ಪೋರ್ಟಲ್ನ್ನು ಸಹ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜ.17ರಿಂದ ಅರ್ಜಿ ಹಾಕಿಕೊಳ್ಳಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಸೂಚಿಸಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಸೂಕ್ತ ಕಾರ್ಯಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಅತಿಥಿ ಉಪನ್ಯಾಸಕರ ಸಮಸ್ಯೆ/ಬೇಡಿಕೆಗಳ ಪರಿಹಾರಕ್ಕಾಗಿ ಸರ್ಕಾರವು ತಿಂಗಳ ಹಿಂದೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಿ, ವರದಿ ನೀಡಲು ಒಂದು ತಿನಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಇನ್ನೂ ಈ ಬಗ್ಗೆ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.
