
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಮರಳಿ ಅಧಿಕಾರ ಹಿಡಿಯುವ ಸಾಧ್ಯತೆಯಿದೆ ಎಂದು ಅನೇಕ ಟಿವಿ ವಾಹಿನಿಗಳ ಚುನಾವಣಾ ಪೂರ್ವ ಸಮೀಕ್ಷೆ ಹೇಳಿವೆ. ಉತ್ತರ ಪ್ರದೇಶ ಉತ್ತರಖಂಡ ಪಂಜಾಬ್ ಗೋವಾ ಮತ್ತು ಮಣಿಪುರ ರಾಜ್ಯ ವಿಧಾನಸಭೆಗಳಿಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದೆ.
ಈ ಪೈಕಿ ಉತ್ತರ ಪ್ರದೇಶ, ಉತ್ತರಖಂಡ ಮತ್ತು ಮಣಿಪುರದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಚುನಾವಣಾ ಚುನಾವಣಾ ಪೂರ್ವ ಸಮೀಕ್ಷೆ ಹೇಳಿವೆ.
ಗೋವಾ ಮತ್ತು ಪಂಜಾಬ್ ರಾಜ್ಯದಲ್ಲಿ ಯಾವುದೇ ಪಕ್ಷಕ್ಕೂ ನಿಚ್ಚಳ ಬಹುಮತ ಬಾರದೆ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮತ್ತೊಂದು ವಾಹಿನಿ ಸಮೀಕ್ಷೆ ಪ್ರಕಾರ ಉತ್ತರಖಂಡದಲ್ಲೂ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಎಂದು ವರದಿಯಾಗಿದೆ.
ಪಂಜಾಬಿನಲ್ಲಿ ಎಎಪಿ ಭಾರಿ ಸದ್ದು ಮಾಡುತ್ತಿದ್ದು ಕಾಂಗ್ರೆಸ್ ಮತ್ತು ಎಎಪಿ ನಡುವೆ ಸ್ಪರ್ಧೆ ಏರ್ಪಡಲಿದೆ. ಪಂಜಾಬ್ ವಿಧಾನಸಭೆಯ 117 ಸ್ಥಾನಗಳ ಪೈಕಿ ಎಎಪಿ 50ರಿಂದ 60 ಸ್ಥಾನ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಉತ್ತರಪ್ರದೇಶದಲ್ಲಿ ಬಿಜೆಪಿ 250ರಿಂದ 272 ಸ್ಥಾನ ಪಡೆಯುವ ಮೂಲಕ ಮತ್ತೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಹಲವು ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಮುಖ್ಯಮಂತ್ರಿ ಆಯ್ಕೆ ಸ್ಪರ್ಧೆಯಲ್ಲಿ ಯೋಗಿ ಆದಿತ್ಯನಾಥ್ ಅವರೆ ಎಲ್ಲರಿಗಿಂತ ಮುಂದೆ ಇದ್ದಾರೆ ಸಮೀಕ್ಷೆಯಲ್ಲಿ ಅವರಿಗೆ ಹೆಚ್ಚು ಬೆಂಬಲ ವ್ಯಕ್ತವಾಗಿದೆ.
ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಗರಿಷ್ಠ 130 ಸ್ಥಾನ ಹಾಗೂ ಕಾಂಗ್ರೆಸ್ ಮತ್ತು ಬಿಎಸ್ಪಿ 15ರಿಂದ 20 ಕಾಂಗ್ರೆಸ್ 8- 10 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ ಎಂದು ಸಮೀಕ್ಷೆಗಳು ಹೇಳಿವೆ.
ಇನ್ನು ಪುಟ್ಟ ರಾಜ್ಯ ಗೋವಾದಲ್ಲೂ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದೆ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಯಿದೆ.
