ಮೇಯರ್, ಉಪಮೇಯರ್ ಸ್ಥಾನಕ್ಕೆ ನಾಳೆ ಚುನಾವಣೆ: ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ

ದಾವಣಗೆರೆ: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಫೆ. 25 ರಂದು ಚುನಾವಣೆ ನಡೆಯಲಿದೆ. ಪಾಲಿಕೆ ಸದಸ್ಯರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಸೇರಿ 30 ಸ್ಥಾನ ಹೊಂದಿರುವ ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.
ಫೆ.25 ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾ ಸಭೆಯನ್ನು ದಾವಣಗೆರೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮೇಯರ್ ಸ್ಥಾನ ಎಸ್ಸಿ ಮಹಿಳಾ ಮೀಸಲಾತಿ ಇದ್ದು, ಈಗ ಉಪಮೇಯರ್ ಆಗಿರುವ ಶಿಲ್ಪಾ ಗೋಪಿನಾಥ್ ಮೇಯರ್ ಆಗುವುದು ಖಚಿತ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಪಾಲಿಕೆಯಲ್ಲಿ ಸದ್ಯ ಕಾಂಗ್ರೆಸ್ ಹಾಗೂ ಬಿಜೆಪಿ ಬಲಾಬಲ ತಲಾ 22 ಸ್ಥಾನಗಳಿದ್ದರೆ, ಜೆಡಿಎಸ್ ಒಂದು ಕ್ಷೇತ್ರದಲ್ಲಿ ಗೆದ್ದಿತ್ತು.
ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಫೆ.25 ರಂದು ಚುನಾವಣೆ ನಡೆಯಲಿರುವುದರಿಂದ ಅಂದು ಮಹಾನಗರ ಪಾಲಿಕೆಯ ಆವರಣದಲ್ಲಿ ಯಾವುದೇ ರೀತಿಯ ವಾಹನಗಳ ನಿಲುಗಡೆಗೆ ಅವಕಾಶವಿರುವುದಿಲ್ಲವೆಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
