ನಾಳೆ ಜಗಳೂರಿಗೆ ಸಿಎಂ ಬೊಮ್ಮಾಯಿ: 1404.15 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

ದಾವಣಗರೆ: ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕು ಹಾಗೂ ಬರದ ತಾಲ್ಲೂಕು ಎಂದೇ ಖ್ಯಾತಿ ಪಡೆದ ಜಗಳೂರು ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಚಾಲನೆ ನೀಡಲಿದ್ದಾರೆ.1404,15 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜಗಳೂರಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಈ ಮಾಹಿತಿ ನೀಡಿದರು. ರೂ.1383.10 ಕೋಟಿ ಮೌಲ್ಯದ 19 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ರೂ.21.05 ಕೋಟಿ ಮೌಲ್ಯದ 18 ಕಾಮಗಾರಿಗಳಿಗೆ ಉದ್ಘಾಟನೆ ನೆರವೇರಿಸುವರು. ಸುಮಾರು 12 ಇಲಾಖೆಗಳಿಂದ 1248 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದು, ಜಗಳೂರು ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ಏ.29 ರಂದು ಬೆಳಗ್ಗೆ 11.30 ಕ್ಕೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರದಷ್ಟು ಜನರು ಭಾಗವಹಿಸಲಿದ್ದಾರೆ ಎಂದು ಸಂಸದರು ತಿಳಿಸಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ವಸತಿ ಸಚಿವ ವಿ. ಸೋಮಣ್ಣ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ಭಾಗವಹಿಸುವರು.
ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ ಅಧ್ಯಕ್ಷತೆ ವಹಿಸುವರು. ಇದಲ್ಲದೇ ಬಳ್ಳಾರಿ ಸಂಸದರಾದ ವೈ.ದೇವೇಂದ್ರಪ್ಪ, ಜಿಲ್ಲೆಯ ಶಾಸಕರು ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಮಾಯಕೊಂಡ ಶಾಸಕರು ಹಾಗೂ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪ್ರೊ. ಎನ್.ಲಿಂಗಣ್ಣ, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಸರ್ಕಾರದ ಮುಖ್ಯ ಸಚೇತಕರು, ವಿಧಾನ ಪರಿಷತ್ ಡಾ.ವೈ.ಎ.ನಾರಾಯಣಸ್ವಾಮಿ, ಶಾಸಕರಾದ ಎಸ್.ಎ.ರವೀಂದ್ರನಾಥ್, ಡಾ.ಶಾಮನೂರು ಶಿವಶಂಕರಪ್ಪ, ಎನ್.ರಾಮಪ್ಪ, ವಿಧಾನಪರಿಷತ್ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ಡಾ.ತೇಜಸ್ವಿಗೌಡ, ಆಯನೂರು ಮಂಜುನಾಥ್, ಎಸ್. ಎಲ್. ಭೋಜೇಗೌಡ, ಚಿದಾನಂದ ಎಂ.ಗೌಡ, ಆರ್.ಶಂಕರ್, ಡಿ.ಎಸ್.ಅರುಣ್, ಕೆ.ಎಸ್.ನವೀನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಸ್.ಸಿದ್ದಪ್ಪ, ಉಪಾಧ್ಯಕ್ಷೆ ಮಂಜಮ್ಮ ಬಿ.ಮಂಜಣ್ಣ ಭಾಗವಹಿಸುವರು ಎಂದರು.
ಶಾಸಕ ಎಸ್. ವಿ. ರಾಮಚಂದ್ರ ಮಾತನಾಡಿ ತಾಲ್ಲೂಕಿನಲ್ಲಿ ಅಭಿವೃದ್ದಿ ಪರ್ವ ನಡೆಯುತ್ತಿದ್ದು ವಿಶೇಷವಾಗಿ ತಾಲ್ಲೂಕಿನ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಗೆ ಚಾಲನೆ ನೀಡುತ್ತಿರುವುದು ಅದ್ದೂರಿ ಕಾರ್ಯಕ್ರಮವಾಗಿದೆ. ಇದು ರಾಷ್ಟ್ರೀಯ ಯೋಜನೆ ಹಂತದಲ್ಲಿದ್ದು ಇದರಿಂದ 9 ಕೆರೆಗಳಿಗೆ ನೀರು ತುಂಬಿಸುವುದು ಮತ್ತು 18423 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದು ಸರ್ಕಾರದ ಶಿಷ್ಟಾಚಾರದನ್ವಯವೇ ಕಾರ್ಯಕ್ರಮ ನಡೆಯಲಿದೆ ಎಂದ ಅವರು ಸುಮಾರು 1248 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
