Breaking NewsLatestಕೊಡಗುರಾಷ್ಟ್ರೀಯ

ದೇಶವನ್ನು ಕೊರೊನಾ ಮುಕ್ತಗೊಳಿಸಲು ಶ್ರಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಧಾನಿ ಮೋದಿ ಕರೆ

ಕೊಡಗು : ಕೋವಿಡ್ ನಿಯಂತ್ರಣ ಸಂಬಂಧ ರಾಷ್ಟ್ರದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬೃಹತ್ ನಗರಗಳ ಆಯುಕ್ತರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ವಿಡಿಯೋ ಸಂವಾದ ನಡೆಸಿದರು.

ಮುಖ್ಯಮಂತ್ರಿಯವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರ ಸಹಕಾರ ಮತ್ತು ಮಾರ್ಗದರ್ಶನ ಪಡೆದು ಕೊರೊನಾ ವೈರಸ್ ವಿರುದ್ಧ ಹೋರಾಡಲು ಪಣ ತೊಡಬೇಕು. ಜಿಲ್ಲೆಯ ಪ್ರತೀ ಗ್ರಾಮವನ್ನೂ ಕೊರೊನಾ ಮುಕ್ತವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಕೇಂದ್ರದ ಗೃಹ ಸಚಿವರು, ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಆಯ್ದ ಜಿಲ್ಲೆಗಳ ಮಹಾನಗರ ಪಾಲಿಕೆ ಆಯುಕ್ತರು, ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಪ್ರಧಾನಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣ ಸಂಬಂಧ ಪ್ರತಿ ಜಿಲ್ಲೆಗಳಲ್ಲಿಯೂ ಕೊರೋನಾ ವೈರಸ್ ಅನ್ನು ಸವಾಲಿನಿಂದ ಎದುರಿಸಬೇಕು. ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಣಯ ಕೈಗೊಳ್ಳಬೇಕು. ಕೃಷಿ ಚಟುವಟಿಕೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಕೊರೊನಾ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರದಿಂದ ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿವೆ. ಸಾರ್ವಜನಿಕರು ಎಂದಿನಂತೆ ಸಾರ್ವಜನಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹೀಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ವಿಡಿಯೋ ಸಂವಾದದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲೆಯಲ್ಲಿ ಕೋಡ್ ನಿಯಂತ್ರಣಕ್ಕಾಗಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕು. ಕಂಟೇನ್‌ಮೆಂಟ್ ವಲಯಗಳಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಗ್ರಾಮಿಣ ಪ್ರದೇಶಗಳಲ್ಲಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ವಿಡಿಯೋ ಸಂವಾದದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ್‌ ಕುಮಾರ್ ಖಂಡು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ಅಧೀಕ್ಷಕ ಡಾ. ಲೋಕೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗೋಪಿನಾಥ್, ಡಾ.ರೂಪೇಶ್ ಗೋಪಾಲ್, ಡಾ.ಮಹೇಶ್ ಇತರರು ಹಾಜರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button