ಕಲಬುರಗಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ 45 ಸಾವಿರ ವಿದ್ಯಾರ್ಥಿಗಳು

ಕಲಬುರಗಿ: ಇಂದಿನಿಂದ ರಾಜದಯದಾದ್ಯಂತ SSLC ಪರೀಕ್ಷೆ ಆರಂಭಗೊಂಡಿದ್ದು, ಕಲಬುರಗಿ ಜಿಲ್ಲೆಯಲ್ಲಿ 45,357 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ.
ಪರೀಕ್ಷೆಗಾಗಿ ಜಿಲ್ಲೆಯಲ್ಲಿ 209 ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಒಂದು ಪರೀಕ್ಷಾ ಕೋಣೆಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಒಂದು ಬೆಂಚ್ ಬಿಟ್ಟು ಮತ್ತೊಂದು ಬೆಂಚನಲ್ಲಿ ಒಬ್ಬ ವಿದ್ಯಾರ್ಥಿ ಕೂಳಿತುಕೊಳ್ಳಲು ವ್ಯವಸ್ಥೆ ಮಾಡಿ ಸೋಷಿಯಲ್ ಡಿಸ್ಟನ್ಸ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದೆ.
ಜ್ವರ, ಕೆಮ್ಮು, ನೆಗಡಿಯ ಲಕ್ಷಣ ಕಂಡು ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಂದು ವಿಶೇಷ ಕೋಣೆ ಮೀಸಲಿಡಲಾಗಿದೆ. ಕೋವಿಡ್ ಕಾರಣಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಒಬ್ಬ ಆರೋಗ್ಯ ಇಲಾಖೆ ಸಿಬ್ಬಂದಿ, ಒಬ್ಬ ಆಶಾ ಕಾರ್ಯಕರ್ತೆ, ಒಬ್ಬ ದೈಹಿಕ ಶಿಕ್ಷಕರ ನಿಯೋಜನೆ ಮಾಡಲಾಗಿದೆ. ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಸ್ಯಾನಿಟೈಸರ್ ಮಾಡಿ ಪರೀಕ್ಷೆ ಕೇಂದ್ರಕ್ಕೆ ಬಿಡಲಾಗಿದೆ.




