ಉಕ್ಕಿ ಹರಿಯುತ್ತಿರುವ ವೇದಗಂಗಾ ನದಿ; ನದಿತೀರದ ಗ್ರಾಮಸ್ಥರ ಸ್ಥಳಾಂತರಕ್ಕೆ ಡಿ.ಸಿ ಕ್ರಮ

ಬೆಳಗಾವಿ: ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವುದರಿಂದ ನದಿತೀರದ ಗ್ರಾಮಗಳ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ವೇದಗಂಗಾ ನದಿಯು ಅಪಾಯಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ ತಾಲ್ಲೂಕಿನ ಕೋಡಣಿ ಗ್ರಾಮ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅವರು ಪರಿಶೀಲಿಸಿದರು.
ತುರ್ತು ಸಂದರ್ಭದಲ್ಲಿ ನದಿತೀರದ ಗ್ರಾಮಗಳ ಜನರ ಸ್ಥಳಾಂತರಕ್ಕೆ ಈಗಾಗಲೇ ಗುರುತಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಜನರಿಗೆ ತಾತ್ಕಾಲಿಕ ಊಟೋಪಹಾರ ಹಾಗೂ ವಸತಿ ಸೌಕರ್ಯ ಕಲ್ಪಿಸಲಾಗಿದೆ.
ಕೆಲವು ಗ್ರಾಮಗಳ ಜನರು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದು, ಕೆಲವು ಕುಟುಂಬಗಳು ತಮ್ಮ ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದುಕೊಂಡಿರುತ್ತಾರೆ. ಆದರೆ ಪ್ರವಾಹದಿಂದ ಬಾಧಿತಗೊಳ್ಳಬಹುದಾದ ನದಿತೀರದ ಎಲ್ಲ ಗ್ರಾಮಗಳ ಜನರ ಸ್ಥಳಾಂತರಕ್ಕೆ ಅನುಕೂಲವಾಗುವಂತೆ ಕಾಳಜಿ ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ.
ಯಾವುದೇ ಗ್ರಾಮಸ್ಥರು ಭಯಪಡುವ ಅಗತ್ಯವಿಲ್ಲ; ಪ್ರತಿ ತಾಲ್ಲೂಕು ಹಾಗೂ ಗ್ರಾಮಮಟ್ಟದಲ್ಲೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ತುರ್ತು ಸಂದರ್ಭದಲ್ಲಿ ಜನರು ಹಾಗೂ ಜಾನುವಾರುಗಳ ಸ್ಥಳಾಂತರಕ್ಕೆ ತಕ್ಷಣವೇ ಅವರು ಕ್ರಮ ಕೈಗೊಳ್ಳಲಿದ್ದಾರೆ.
ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್. ತಂಡಗಳು ಕೂಡ ಜಿಲ್ಲೆಯಲ್ಲಿ ಬೀಡು ಬಿಟ್ಟಿರುವುದರಿಂದ ಜನರ ರಕ್ಷಣೆಗೆ ಕ್ರಮ ಕೈಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಕೊಯ್ನಾ ಜಲಾಶಯ ವ್ಯಾಪ್ತಿಯಲ್ಲಿ ಇಂದು ಮಳೆಯ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಜಲಾಶಯಗಳಿಂದ ನಿರಂತರವಾಗಿ ನೀರು ಬಿಡುಗಡೆ ಮಾಡಲಾಗುತ್ತಿರುವುದರಿಂದ ಪ್ರವಾಹಭೀತಿ ಕಡಿಮೆಯಾಗುತ್ತಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳು ವೇದಗಂಗಾ ಸೇತುವೆ, ನಿಪ್ಪಾಣಿ ತಾಲ್ಲೂಕಿನ ಕೋಡಣಿ ಗ್ರಾಮ, ಮಮದಾಪುರ, ಸಂಕೇಶ್ವರ ಪಟ್ಟಣದ ಕುಂಬಾರ ಓಣಿ, ಮಠಗಲ್ಲಿ, ಶಂಕರಲಿಂಗ ದೇವಸ್ಥಾನದ ಬಳಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಇದಾದ ಬಳಿಕ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆ ಬಳಿ ಕೃಷ್ಣಾ ನದಿ ಹರಿವು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಚಿಕ್ಕೋಡಿಯಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿ ಹಿರೇಮಠ ಅವರು, ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ಎಲ್ಲ ನೋಡಲ್ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದುಕೊಂಡು ಪರಿಸ್ಥಿತಿಯ ಮೇಲೆ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು




