ಸೆ.13ರಿಂದ 10 ದಿನ ವಿಧಾನಮಂಡಲ ಅಧಿವೇಶನ; ಸಂಪುಟ ತೀರ್ಮಾನ

ಬೆಂಗಳೂರು: ಸೆಪ್ಟೆಂಬರ್ 13 ರಿಂದ 24ರವರೆಗೆ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆ ತೀರ್ಮಾನಿಸಿದೆ.
ರಾಜ್ಯ ಸಚಿವ ಸಂಪುಟ ಸಭೆ ನಂತರ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾತಂತ್ರ್ಯೋತ್ಸವ ದಿನದಂದು ಘೋಷಿಸಿದ ಅಮೃತ ಯೋಜನೆಗಳಿಗೆ ಅನುದಾನ ಒದಗಿಸಲು ಸಭೆ ಒಪ್ಪಿಗೆ ನೀಡಿದೆ ಎಂದರು.
ಅಮೃತ ನಗರ ನಿರ್ಮಲ ಯೋಜನೆ ಅಡಿ 75ನಗರ ಸ್ಥಳೀಯ ಸಂಸ್ಥೆ ಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಚತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಪ್ರತಿ ಸ್ಥಳೀಯ ಸಂಸ್ಥೆಗೆ ತಲಾ ಒಂದು ಕೋಟಿ ರೂಪಾಯಿಯಂತೆ 75 ಕೋಟಿ ರೂ.ಗಳ ನೆರವು ನೀಡುವ ಆರ್ಥಿಕ ಯೋಜನೆಗೂ ಸಂಪುಟ ಅಸ್ತು ಎಂದಿದೆ ಎಂದರು.
ಅಮೃತ ಉತ್ಪಾದಕ ಯೋಜನೆಯಡಿ ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪನೆ ಮಾಡಿ, ಪ್ರತಿ ಸಂಸ್ಥೆಗೆ 30 ಲಕ್ಷ ರೂ.ಗಳಂತೆ 3 ವರ್ಷದ ಅವಧಿಗೆ 225 ಕೋಟಿ ರೂ.ಗಳ ಅನುದಾನ ಒದಗಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.
ಅಮೃತ ಗ್ರಾಮ ಪಂಚಾಯ್ತಿ ಯೋಜನೆಯಡಿ ಆಯ್ದ 250 ಗ್ರಾಮ ಪಂಚಾಯ್ತಿಗಳಲ್ಲಿ ಬೀದಿ ದೀಪ, ಮನೆ ಮನೆಗಳಿಗೆ ಕುಡಿಯುವ ನೀರು ಸರಬರಾಜು, ಘನತ್ಯಾಜ್ಯ ವಿಂಗಡಣೆ, ವಿಲೇವಾರಿ, ಸೌರವಿದ್ಯುತ್ ಅಳವಡಿಕೆ, ಡಿಜಿಟಲ್ ಲೈಬ್ರರಿಗಳೊಂದಿಗೆ ಪ್ರತಿ ಗ್ರಾ.ಪಂ.ಗಳಿಗೆ 25 ಲಕ್ಷ ರೂ.ಗಳನ್ನು
ನೀಡಲಾಗುವುದು ಎಂದರು.
ಅಮೃತ ಶಾಲಾ ಸೌಲಭ್ಯ ಯೋಜನೆಯಡಿ ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ಪ್ರತಿ ಶಾಲೆಗೆ 10 ಲಕ್ಷ ರೂ.ಗಳಂತೆ 75 ಕೋಟಿ ರೂ.ಗಳ ಅನುದಾನ ಒದಗಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದರು.
ಅಮೃತ ಆರೋಗ್ಯ ಮೂಲ ಸೌಕರ್ಯ ಉನ್ನತೀಕರಣ ಯೋಜನೆಯಡಿ ರಾಜ್ಯದ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕಾಗಿ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ.ಗಳ ವೆಚ್ಚಕ್ಕೂ ಸಂಪುಟ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದರು.
ಆರೋಗ್ಯ ಉಪಕೇಂದ್ರಗಳ ಉನ್ನತೀಕರಣ ರಾಜ್ಯದ 2859 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜೇಗೇರಿಸಲು 478 ಕೋಟಿ ರೂ.ಗಳನ್ನು ಒದಗಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
478 ಕೋಟಿ ರೂ. ಗಳ ಪೈಕಿ ಕೇಂದ್ರ ಸರ್ಕಾರ ಶೇ. 60 ರಷ್ಟು ಅನುದಾನ ಭರಿಸಲಿದ್ದು, ಮೂರು ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಉಪಕೇಂದ್ರಗಳ ಮೇಲ್ದರ್ಜೆ ಕಾರ್ಯ ಅನುಷ್ಠಾನವಾಗಲಿದೆ ಎಂದರು. ರಾಜ್ಯದಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಸ್ಥಾಪಿಸಲು ಅವಕಾಶ
ನೀಡುವ ಮಾನಸಿಕ ಆರೋಗ್ಯ ನಿಯಮಗಳಿಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಅವಧಿಯಲ್ಲಿ ರಚನೆಯಾಗಿದ್ದ ಸಚಿವ ಸಂಪುಟದ ಉಪಸಮಿತಿಗಳು ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ
ಹೊಸದಾಗಿ 14 ಸಚಿವ ಸಂಪುಟ ಉಪಸಮಿತಿಗಳನ್ನು ರಚಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲು ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.
ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ, ಚರ್ಚಿಸಿಲ್ಲ
ರಾಜ್ಯದ ಇಂದಿರಾ ಕ್ಯಾಂಟಿನ್‍ಗಳ ಹೆಸರನ್ನು ಬದಲಾಯಿವವ ಬಗ್ಗೆ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
