ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು

ರಾಮನಗರ: ಸಿಎಂ ಇರುವ ವೇದಿಕೆಯಲ್ಲೆ ಸಂಸದ ಡಿ.ಕೆ.ಸುರೇಶ್ ಗೂಂಡಾಗಿರಿ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಕೆಲಕಾಲ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆ ನಡೆಸಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರು ಸಂಸದ ಡಿ.ಕೆ.ಸುರೇಶ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರ ಸಂಸದ ಡಿಕೆ ಸುರೇಶ್ ಬೆಂಬಲಿಗರು ಸಚಿವರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಂತೆ ಇತ್ತ ಬಿಜೆಪಿ ಕಾರ್ಯಕರ್ತರು ಸಂಸದರ ವಿರುದ್ದ ಪ್ರತಿಭಟನೆಗಿಳಿದ್ದಾರೆ. ಮುಖ್ಯಮಂತ್ರಿ ಇರುವ ವೇದಿಕೆಯಲ್ಲೆ ಸಂಸದ ಡಿ.ಕೆ. ಸುರೇಶ್ ಗೂಂಡಾಗಿರಿ ತೋರಿ ರೌಡಿಗಳಂತೆ ವರ್ತಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಜಮಾಯಿಸಿ ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆದು ಡಿಕೆ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಹೆದ್ದಾರಿ ಸಂಚಾರದಲ್ಲೂ ಅಸ್ತ ವ್ಯಸ್ತಗೊಂಡು ಸಂಚಾರಕ್ಕೆ ಉಂಟಾಗಿತ್ತು.
