ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ, ಬಿಜೆಪಿ ವಿರುದ್ಧ ಜನರ ಹಿಡಿಶಾಪ; ಸಿದ್ದರಾಮಯ್ಯ
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಂತಹ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಜನ ಹಡಿಶಾಪ ಹಾಕುತ್ತಿದ್ದಾರೆ. ಕಣ್ಣೀರಿನಲ್ಲಿ ಕೈತೊಳೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಸಭೆ
ರಾಹುಲ್ ಗಾಂಧಿ ಅವರು ರಾಜ್ಯದ ಸುಮಾರು 16 ಜನ ಹಿರಿಯ ನಾಯಕರನ್ನು ದೆಹಲಿಗೆ ಕರೆದು ಸಭೆ ನಡೆಸಿ ರಾಜ್ಯದ ಸದ್ಯದ ಸ್ಥಿತಿಗತಿ, ಮುಂದೆ ನಾವು ಗೆಲ್ಲಬೇಕಾದರೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳು ಬಗ್ಗೆ ಚರ್ಚೆ, ಗೆಲ್ಲುವ ಅವಕಾಶ ಇರುವುದರಿಂದ ಎಚ್ಚರ ತಪ್ಪದೆ ಕೆಲಸ ಮಾಡಬೇಕು ಎಂಬ ಸಲಹೆ ಹಾಗೂ ಮತ್ತೆ ಅಧಿಕಾರಕ್ಕೆ ಬರಲು ಅಗತ್ಯವಿರುವ ಬೆಂಬಲ, ಸಹಕಾರದ ಭರವಸೆ ನೀಡಿದ್ದಾರೆ ಎಂದರು.
ಕಾಂಗ್ರೆಸ್ ನಾಯಕತ್ವ ಒಗ್ಗಟ್ಟಾಗಿದೆ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂಬ ಮಾಹಿತಿ ತಮಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಬಿಜೆಪಿಯವರು ನಮ್ಮ ನಾಯಕರ ನಡುವೆ ಭಿನ್ನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಾರೆ. ಅವೆಲ್ಲ ಬರಿ ಸುಳ್ಳು. ಎಂದರು.
ಸಂವಿಧಾನದ ಉಳಿವಿಗೆ ಕಾಂಗ್ರೆಸ್
ನಾವು ರಾಜ್ಯದ ಜನರ ಮತ್ತು ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ, ನಾವು ಅಧಿಕಾರಕ್ಕೆ ಬರಬೇಕು ಎನ್ನುವುದಕ್ಕಿಂತ ರಾಜ್ಯ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಈಶ್ವರಪ್ಪ ವಿರುದ್ಧ ಹೋರಾಟ ನಿಲ್ಲಲ್ಲ
ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ಹೋರಾಟ ಮುಂದುವರಿಸುತ್ತದೆ ಎಂದು ಹೇಳಿದ ಸಿದ್ದರಾಮಯ್ಯ, ಮೇಕೆದಾಟು ಯೋಜನೆಗೆ ಪರಿಸರ ಅನುಮತಿ ಪಡೆಯಲು ಡಬಲ್ ಎಂಜಿನ್ ಸರ್ಕಾರದಿಂದ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
27 ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ
ಬೆಂಗಳೂರು: ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಮೇಕೆದಾಟು ಪಾದಯಾತ್ರೆಯನ್ನು 5 ದಿನದ ಬದಲು ಮೂರು ದಿನಕ್ಕೆ ಮೊಟಕುಗೊಳಿಸಲಾಗಿದೆ. ಬಜೆಟ್ ಅಧಿವೇಶ ಮಾರ್ಚ್ ನಲ್ಲಿ ಆರಂಭವಾಗುತ್ತಿದ್ದು, ಅದಕ್ಕಾಗಿ ಈ ತಿಂಗಳ 27 ರಿಂದಲೇ ಪಾದಯಾತ್ರೆ ಮಾಡೋಣ ಎಂದು ನಿರ್ಧರಿಸಿದ್ದೇವೆ. ಬೆಂಗಳೂರು ನಗರದಲ್ಲಿ 5 ದಿನದ ಬದಲು ಮೂರೇ ದಿನ ಪಾದಯಾತ್ರೆ ಮಾಡುತ್ತೇವೆ. 3 ನೇ ತಾರೀಖಿನಂದು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಭೆ ನಡೆಸಿ ಪಾದಯಾತ್ರೆ ಮುಕ್ತಾಯ ಮಾಡುತ್ತೇವೆ ಎಂದು ತಿಳಿಸಿದರು.
ತಮಿಳುನಾಡಿಗೆ ಯೋಜನೆ ಬಗ್ಗೆ ತಕರಾರು ಮಾಡಲು ಯಾವುದೇ ಕಾನೂನಾತ್ಮಕ ಹಕ್ಕಿಲ್ಲ. ಕಾವೇರಿ ವಿವಾದವನ್ನು ಜೀವಂತವಾಗಿಡಲು ತಮಿಳುನಾಡಿನ ಪಕ್ಷಗಳು ಪ್ರಯತ್ನ ಮಾಡುತ್ತಿವೆ ಎಂದು ದೂರಿದರು. ಯುಕ್ರೇನ್ ನಿಂದ ರಾಜ್ಯದ ಮತ್ತು ದೇಶದ ಎಲ್ಲಾ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವುದು ಕೇಂದ್ರ ಸರ್ಕಾರದ ಹೊಣೆ ಎಂದರು.
ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಯಾವುದೇ ಅನ್ಯರಾಜ್ಯಗಳ ಅನುಮತಿ ಬೇಕಾಗಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಇದನ್ನು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಹೀಗಿದ್ದರೂ ವಿಳಂಬ ಏಕೆ ಎಂದು ಅರ್ಥವಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
