ಕೋವಿಡ್ ಹೆಚ್ಚಳ, ವೈದ್ಯರ ರಜೆ ರದ್ದುಗೊಳಿಸಿದ ದೆಹಲಿ ಏಮ್ಸ್

ನವದೆಹಲಿ: ದೇಶದ ರಾಜಧಾನಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ ವೈದ್ಯರ ಚಳಿಗಾಲದ ರಜೆ ರದ್ದುಪಡಿಸಿದೆ. ಈ ಸಂಬಂಧ ಏಮ್ಸ್ ಅಧಿಕೃತ ಪ್ರಕಟಣೆ ಹೊರಡಿಸಿದ್ದು ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ರಜೆ ರದ್ದು ಪಡಿಸಲಾಗಿದ್ದು ಎಲ್ಲಾ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸ್ಪಷ್ಟಪಡಿಸಲಾಗಿದೆ.
ಈ ಮೊದಲು ಪ್ರಕಟಿಸಿದಂತೆ ಜನವರಿ 5 ರಿಂದ 10 ರ ವರೆಗೆ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಹಠಾತ್ತನೇ ದೆಹಲಿಯಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರಿಗೆ ನೀಡುತ್ತಿದ್ದ ಚಳಿಗಾಲದ ರಜೆಯನ್ನು ರದ್ದುಪಡಿಸಲಾಗಿದೆ ಎಂದು ಏಮ್ಸ್ ಆಡಳಿತ ಮಂಡಳಿ ತಿಳಿಸಿದೆ.
ಕಳೆದ ಒಂದು ವಾರದ ಅವಧಿಯಲ್ಲಿ ದೇಶಾದ್ಯಂತ ಕೋವಿಡ್ ಮರಣ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳು ಮರಣ ಪ್ರಮಾಣ ತಗ್ಗಿಸಲು ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ.
ಈ ನಡುವೆ ದೆಹಲಿಯಲ್ಲಿ ಈವರೆಗೆ 5,481 ಹೊಸ ಪ್ರಕರಣಗಳು ವರದಿಯಾಗಿದ್ದು, 14,889ಸಕ್ರಿಯ ಪ್ರಕರಣಗಳು ವರದಿಯಾಗಿವೆ.
