ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಲು ಚಿಂತನೆ: ಸಿಎಂ

ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಸಂಬಂಧ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸರ್ವಪಕ್ಷಗಳ ನಾಯಕರ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶೇ.7.5 ಕ್ಕೆ ಮೀಸಲಾತಿಯನ್ನು ಹೆಚ್ಚಿಸಬೇಕು ಎಂಬುದು ಎಸ್‌ಟಿ ಸಮುದಾಯವರ ಬೇಡಿಕೆಯಾಗಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ ಎಂದರು.
ಹಿಂದಿನ ಸರ್ಕಾರ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಸಂಬಂಧ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದರು.
ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಎಲ್ಲಾ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ.50 ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಮೀಸಲಾತಿ ಕೊಡುವುದಾದರೆ ಸಂವಿಧಾನಾತ್ಮಕವಾಗಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ನೀಡಬೇಕು. ಆ ನಿಟ್ಟಿನಲ್ಲಿ ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಮೂರೂ ವರದಿಗಳ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ಅದನ್ನು ಸರ್ವ ಪಕ್ಷಗಳ ಸಭೆಯಲ್ಲಿಟ್ಟು, ಒಪ್ಪಿಗೆ ಪಡೆಯಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
2ಎ ವರ್ಗಕ್ಕೆ ಸೇರಿರುವ ಕುರುಬ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬ ಬೇಡಿಕೆ ಇದೆ. ಕೆಲವರು 3ಬಿ ನಲ್ಲಿರುವವರು 2ಎ ವರ್ಗಕ್ಕೆ ಸೇರಬೇಕು, 3ಬಿ ನಲ್ಲಿ ಇಲ್ಲದವರು, 3ಬಿ ವರ್ಗಕ್ಕೆ ಸೇರಬೇಕು ಎಂಬ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಾವು ಮುಂದುವರೆಯಬೇಕು. ಮೂಲಭೂತವಾಗಿ ಶೇ.50 ದಾಟಬೇಕೋ, ದಾಟಿದರೆ ಕಾನೂನಿನ ರೀತಿ ಹೇಗೆ ಮಾಡಬೇಕು ಎನ್ನುವ ವಿಚಾರವಿದೆ. ಮೊದಲು ನಾಗಮೋಹನ್ ದಾಸ ವರದಿ ಆಧಾರದ ಮೇಲೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಆದಷ್ಟು ಶೀಘ್ರವಾಗಿ ನ್ಯಾಯಮೂರ್ತಿ ಸುಭಾಷ್ ಅಡಿಯವರ ವರದಿಯನ್ನು ಪಡೆದು, ನಂತರ ಸರ್ವಪಕ್ಷ ಸಭೆಯ ಮುಂದಿಡಲಾಗುವುದು. ನಂತರ ವಿಧಾನಸಭೆಯಲ್ಲಿ ಮಂಡಿಸಿ ನ್ಯಾಯ ಒದಗಿಸುವ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
