ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಿ.ಕೆ ಸುರೇಶ್ ಚಾಲನೆ

ರಾಮನಗರ: ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದ್ದು, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಜಿಲ್ಲೆಗೆ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ಗ್ರಾಮದ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲೂ
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಸೋಗಾಲಪಾಳ್ಯ ಮತ್ತು ಎಚ್.ಮೊಗೇನಹಳ್ಳಿಯಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಸಂಪರ್ಕ ರಸ್ತೆಗಳು ಇಲ್ಲದ ಕಾರಣ ಸುತ್ತಿಬಳಸಿಕೊಂಡು ಹೋಗಬೇಕಾಗಿದೆ. ಈ ಸುತ್ತಾಟವನ್ನು ಕಡಿಮೆ ಮಾಡುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಸಂಪರ್ಕ ರಸ್ತೆಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದ್ದು, ಯೋಜನೆಯಿಂದ ಎಷ್ಟೋ ಗ್ರಾಮಗಳ ಜನರಿಗೆ ಅನುಕೂಲವಾಗಿದೆ ಎಂದು ಹೇಳಿದರು.
