ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ: ತನಿಖೆಯಾಗಲಿ ಎಂದ ಆಮ್ ಆದ್ಮಿ ಪಾರ್ಟಿ!

ಧಾರವಾಡ: ಇತ್ತೀಚೆಗೆ ರಾಜ್ಯದಲ್ಲಿ ನಡೆದ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹಾಗೂ ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಸುವಂತೆ ಅಗ್ರಹಿಸಿ, ಧಾರವಾಡದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೇರಿ ವಿದ್ಯಾರ್ಥಿಗಳು ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ಆಮ್ ಆದ್ಮಿ ಪಕ್ಷದ ಧಾರವಾಡ ಜಿಲ್ಲಾ ಘಟಕದ ನೇತೃತ್ವದಲ್ಲಿ, ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಿದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಪೊಲೀಸ್ ಇಲಾಖೆಯು ಅದರದ್ದೇ ಆದ ಗೌರವವನ್ನು ಹೊಂದಿದ್ದು, ಆದರೆ ಇತ್ತೀಚೆಗೆ ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿಯಿಂದಾಗಿ ಗೌರವವನ್ನು ಹಾಳು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಇತ್ತೀಚೆಗೆ ರಾಜ್ಯದಲ್ಲಿ ನಡೆದ ಪಿಎಸ್‌ಐ ಹುದ್ದೆ ಪರೀಕ್ಷೆ ಸೇರಿದಂತೆ ನೇಮಕಾತಿಯಲ್ಲೂ ಅಕ್ರಮ ನಡೆಸಲಾಗಿದೆ. ಪರೀಕ್ಷೆಯ ನಿಯಮಾವಳಿಗಳನ್ನು ಇಲ್ಲಿ ಗಾಳಿಗೆ ತೂರಿ ನಡೆಸಲಾಗಿದ್ದು, ಇದರ ಜೊತೆಗೆ 540 ಅಭ್ಯರ್ಥಿಗಳ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂದು ಆರೋಪಿಸಿದರು. ಹಾಗಾಗಿ ಈ ಕುರಿತು ರಾಜ್ಯ ಸರ್ಕಾರ ಪಿಎಸ್‌ಐ ನೇಮಕಾತಿಯ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಅಕ್ರಮ ನಡೆಸುವವರು ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಸಿಗುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಒತ್ತಾಯ ಮಾಡಿದರು. ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರು ಒಂದು ವೇಳೆ ನಿರ್ಲಕ್ಷ್ಯ ತೋರಿದಲ್ಲಿ ಮತ್ತೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
