ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಧರಿಸಿದ್ರೆ ಕಠಿಣ ಕ್ರಮ: ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ನಿನ್ನೆಯಿಂದಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಹಲವು ಕಡೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷೆ ಬರೆಯುತ್ತಿದ್ರೆ, ಕೆಲವು ಕಡೆಗಳಲ್ಲಿ ಹಿಜಾಬ್ ಗಾಗಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಇದೀಗ ಗೃಹ ಸಚಿವರು ಹಿಜಾಬ್ ಕುರಿತು ತೀರ್ಪನ್ನು ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ , ಯಾರಾದರೂ ಹಿಜಾಬ್ ನಿಯಮಗಳನ್ನು ಉಲ್ಲಂಘಿಸಿದರೆ ಕ್ರಮ ಎದುರಿಸಬೇಕಾಗುತ್ತದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದರಲ್ಲಿ ಯಾವುದೇ ರಾಜಿಯಾಗುವುದಿಲ್ಲ. ಪ್ರತಿಯೊಬ್ಬರೂ ಹೈಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಎಚ್ಚರಿಕೆ ನೀಡಿದರು.
ಇದೇ ವಿಷಯವಾಗಿ ಈಗಾಗ್ಲೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯಿಸಿದ್ದು ಸರಕಾರದ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪೊಲೀಸರು ಸ್ವಾಭಾವಿಕವಾಗಿ ಕ್ರಮ ತೆಗೆದುಕೊಳ್ಳುತ್ತಾರೆ. ಯಾವುದೇ ಮಕ್ಕಳು ಅಂತಹ ವಿಷಯಗಳಿಗೆ ಅವಕಾಶ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ರಾಜ್ಯದಾದ್ಯಂತ 3,440 ಪರೀಕ್ಷಾ ಕೇಂದ್ರಗಳಲ್ಲಿ 48,000ಕ್ಕೂ ಹೆಚ್ಚು ಪರೀಕ್ಷಾ ಕೊಠಡಿಗಳಲ್ಲಿ 8.74 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ನಿನ್ನೆ ಮಾರ್ಚ್ 28ರಿಂದ ಪರೀಕ್ಷೆಗಳು ಆರಂಭವಾಗಿದ್ದು ಏಪ್ರಿಲ್ 11ರಂದು ಪರೀಕ್ಷೆ ಕೊನೆಗೊಳ್ಳಲಿದೆ.
