ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಒಲಿದ ಮತ್ತೊಂದು ಪ್ರಶಸ್ತಿ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಘೋಷಣೆಯಾಗಿದೆ. ಈಗಾಗಲೇ ಕರ್ನಾಟಕ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿದ್ದು, ಇದೀಗ ಮತ್ತೊಂದು ಪ್ರಶಸ್ತಿ ಘೋಷಣೆಯಾಗಿದೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, “ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡುವ ಸಹಕಾರ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನಟ ಪುನೀತ್ ರಾಜ್‌ಕುಮಾರ್‌ಗೆ ನೀಡಲಾಗುತ್ತದೆ” ಎಂದಿದ್ದಾರೆ.
“ನಂದಿನಿ ಹಾಲಿನ ಉತ್ಪನ್ನಗಳಿಗೆ ನಟ ಪುನೀತ್ ರಾಜ್‌ಕುಮಾರ್ ರಾಯಭಾರಿಯಾಗಿದ್ದರು. ರೈತರಿಗೆ ಅನುಕೂಲವಾಗಲಿ ಅನ್ನೋ ಕಾರಣಕ್ಕೆ ಒಂದೇ ಒಂದು ರೂಪಾಯಿಯೂ ಸ್ವೀಕರಿಸದೆ ಉಚಿತವಾಗಿ ರಾಯಭಾರಿಯಾಗಿ ಅವರು ಸೇವೆ ಸಲ್ಲಿಸಿದ್ದರು. ಈ ಸೇವೆಯನ್ನು ಪರಿಗಣಿಸಿ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ” ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು.
ಮಾರ್ಚ್ 20ರಂದು ಕೆಂಗೇರಿ ಉಪನಗರದಲ್ಲಿ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಸಹಕಾರ ರತ್ನ ಪ್ರಶಸ್ತಿ 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದರು.
