Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಕ್ರಮ : 1-15 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲೇ ಲಸಿಕೆ

ಬೆಂಗಳೂರು: ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ಇಂದಿನಿಂದ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ ರಾಜ್ಯದ ಜೆಇ ಎಂಡೆಮಿಕ್ ಪೀಡಿತ ಎಂದು ಗುರುತಿಸಿರುವ 10 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಜೆಇ ಮೆದುಳು ಜ್ವರ ಫ್ಲೇವಿ ವೈರಸ್ ನಿಂದ ಬರುತ್ತದೆ. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ದಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಸಾಧ್ಯತೆಗಳಿವೆ. ಹೀಗಾಗಿ ಡಿಸೆಂಬರ್ ಮೊದಲ ವಾರದಲ್ಲಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯ ಇನ್ನಿತರ ಪ್ರದೇಶಗಳಲ್ಲಿ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button