ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ: ಆರ್. ಅಶೋಕ್

ದಾವಣಗೆರೆ: ಉಕ್ರೇನ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಹಾಗೂ ಜನರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರ್ಕಾರವು ನಿರಂತರ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವವರನ್ನು ರಾಜ್ಯಕ್ಕೆ ಕರೆ ತರಲು ಐಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ರಾಜ್ಯದ ಯಾವುದೇ ಮಕ್ಕಳು ಉಕ್ರೇನ್ ನಲ್ಲಿ ಸಂಕಷ್ಟದಲ್ಲಿ ಇದ್ದರೇ ಆ ಬಗ್ಗೆ ಮಾಹಿತಿ ಪಡೆದು ಮುಂದಿನ ಕಾರ್ಯ ನಡೆಸಲಾಗುವುದು ಎಂದು ತಿಳಿಸಿದರು.
ದೆಹಲಿಯಿಂದ ಬೆಂಗಳೂರಿಗೆ ಬರುವವರ ಎಲ್ಲಾ ಖರ್ಚು ರಾಜ್ಯ ಸರ್ಕಾರವೇ ಭರಿಸುತ್ತದೆ. ಇನ್ನಷ್ಟು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸುರಕ್ಷಿತವಾಗಿ ಕನ್ನಡದ ಮಕ್ಕಳನ್ನ ಕರೆತರಲು ಬದ್ಧ. ಪ್ರಧಾನಿ ಹಾಗೂ ರಾಜ್ಯ ಸರ್ಕಾರ ನಿಮ್ಮ ಪರವಾಗಿದೆ. ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅಶೋಕ್ ಹೇಳಿದರು.
