ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ; ಅದೇನು ಗೊತ್ತಾ?

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ವೇಳೆ ರೋಹಿಣಿ ವಿರುದ್ಧ ಬಟ್ಟೆ ಬ್ಯಾಗ್ ಖರೀದಿ ಹಗರಣ ಆರೋಪ ಕೇಳಿ ಬಂದಿತ್ತು. ಇದೀಗ ಹಗರಣದ ತನಿಖೆಗೆ ಸರ್ಕಾರ ಆದೇಶ ನೀಡಿದೆ. ಈ ಹಗರಣವನ್ನು ಶಾಸಕ ಸಾ.ರಾ ಮಹೇಶ್ ಬಯಲಿಗೆ ತಂದಿದ್ದರು. ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸತತ ಆರೋಪಗಳನ್ನು ಮಾಡುತ್ತಿದ್ದ ಜೆಡಿಎಸ್ ಶಾಸಕ ಸಾ.ರಾ ಮಹೇಶ್, ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಅವರು ದಾಖಲೆಗಳನ್ನು ಕೂಡ ನೀಡಿದ್ದರು.
ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ. ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್ಗಳನ್ನು ಖರೀದಿಸಲಾಗಿತ್ತು ಎಂದು ಮಹೇಶ್ ದೂರಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ ₹ 9 ರಿಂದ 19 ರೂಪಾಯಿಗೆ ಸಿಗೋ ಬ್ಯಾಗ್ ಗಳನ್ನು ಜಿಲ್ಲಾಧಿಕಾರಿ 52 ರೂಪಾಯಿ ನೀಡಿ ಖರೀದಿಸಿದ್ದರು. ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗಿದೆ ಎಂದು ಶಾಸಕ ಸಾ.ರಾ.ಮಹೇಶ್ ಅರೋಪಿಸಿದ್ದರು.
