ಪೋಷಕರು 2 ವ್ಯಾಕ್ಸಿನ್ ಪಡೆದಿದ್ರೆ ಮಕ್ಕಳಿಗೆ ಶಾಲೆಗೆ ಪ್ರವೇಶ: ಸಚಿವ ಆರ್ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಒಮಿಕ್ರಾನ್ ತಡೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು. ಅಧಿಕೃತವಾಗಿ ಈ ಪ್ರಕರಣಗಳ ಬಗ್ಗೆ ಅಧ್ಯಯನದ ವರದಿ ಬಂದಿಲ್ಲ. ಅನೌಪಚಾರಿಕ ವರದಿ ಬಂದಿದೆ. ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು. ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.
ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ 2ನೇ ಅಲೆ ವೇಳೆ ಸಿದ್ಧಗೊಂಡಿದ್ದ ಕೊವಿಡ್ ಬೆಡ್, ಐಸಿಯು ಬೆಡ್‌ಗಳನ್ನು ಮತ್ತೆ ಸಿದ್ಧಪಡಿಸಲು ಸೂಚಿಸಲಾಗಿದೆ. ಆಕ್ಸಿಜನ್ ಪ್ಲ್ಯಾಂಟ್ ಸಿದ್ಧಪಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ ಎಂದರು.
ರಾಜ್ಯದಲ್ಲಿ ಮತ್ತೆ ಕಂಟ್ರೋಲ್ ರೂಂ ಆರಂಭಿಸಲಾಗುವುದು. ಅದಕ್ಕೆ ಬೇಕಾದ ಸಿಬ್ಬಂದಿ ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಔಷಧಿಗಳನ್ನು ಮುಂಚಿತವಾಗಿಯೇ ಖರೀದಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಎಲ್ಲರೂ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಬೇಕು. ವ್ಯಾಕ್ಸಿನೇಷನ್ ಹೆಚ್ಚಳ ಮಾಡಬೇಕು. ಮಾಸ್ಕ್ ಕಡ್ಡಾಯಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದು. ಏರ್ ಪೋರ್ಟ್ ಗಳಲ್ಲಿ ಕಠಿಣ ಕ್ರಮ, ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಹೊಸ ಮಾರ್ಗಸೂಚಿ ಮುಂತಾದ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಇನ್ನು ಈ ಬಾರಿ ಬೆಳಗಾವಿಯಲ್ಲೇ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.
