
ಕೊಲಂಬೋ: ಇವತ್ತಿನ ಶ್ರೀಲಂಕಾದ ಆರ್ಥಿಕ ಪರಿಸ್ಥಿತಿಗೆ ಅಧ್ಯಕ್ಷ ರಾಜಪಕ್ಸೆ ಅವರೇ ಕಾರಣ. ಅವರ ನೀತಿಗಳಿಂದಲೇ ಜನರಿಗೆ ಈ ರೀತಿಯ ಹಣದುಬ್ಬರದ ಸಂಕಷ್ಟ ಬಂದಿದೆ ಅಂತೇಳಿ ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆ ಪ್ರತಿಭಟನೆ ನಡೆಸಲಾಗಿದೆ.
ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ಗುರುವಾರ ತಡರಾತ್ರಿ ಪ್ರತಿಭಟನೆಗಳು ನಡೆದಿವೆ. ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ನಿವಾಸದ ಮುಂದೆ ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಿದ್ದಾರೆ. ರಾಜಪಕ್ಸೆ ಅವರ ರಾಜೀನಾಮೆಗೆ ಒತ್ತಾಯಿಸಿರುವ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.
ಪ್ರತಿಭಟನೆಯನ್ನು ಹತ್ತಿಕ್ಕಲು ಅರೆಸೇನಾ ಪೊಲೀಸ್ ಘಟಕ, ವಿಶೇಷ ಕಾರ್ಯಪಡೆಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಲಾಗಿದೆ. ಆಕ್ರೋಶಭರಿತ ಪ್ರತಿಭಟನಾಕಾರರು ಪೊಲೀಸರ ಮೇಲೆ ಬಾಟಲಿ ಹಾಗೂ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸುದ್ದಿಸಂಸ್ಥೆ ‘ರಾಯಟರ್ಸ್’ ವರದಿ ಮಾಡಿದೆ.
ಬೆಲೆ ಹೆಚ್ಚಳ, ಅಡುಗೆ ಅನಿಲ, ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಕೊರತೆಗೆ ರಾಜಪಕ್ಸೆ ಅವರ ನೀತಿಗಳೇ ಕಾರಣ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ ರಾಜಪಕ್ಸೆ ಅವರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. 1948ರ ಸ್ವಾತಂತ್ರ್ಯ ಬಳಿಕ ಶ್ರೀಲಂಕಾ ಸರ್ಕಾರ ಈಗ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಹಣದುಬ್ಬರದಿಂದ ಡೀಸೆಲ್ ಬೆಲೆ ದ್ವಿಗುಣವಾಗಿದೆ.
