Breaking NewsLatestರಾಜ್ಯ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಕೃಷ್ಣಾ, ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಅನುಮತಿ ನೀಡುವ ಕುರಿತು ಕೇಂದ್ರ ಜಲ ಶಕ್ತಿ ಸಚಿವರೊಂದಿಗೆ ಚರ್ಚೆ ನಡೆಸಿದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಸಿಎಂ,  ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ನಾವು ನ್ಯಾಯಸಮ್ಮತವಾಗಿ ಡಿಪಿಆರ್ ಸಲ್ಲಿಸಿದ್ದೇವೆ ಎಂದರು.

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಕಾವೇರಿ ನ್ಯಾಯಮಂಡಳಿ ಕರ್ನಾಟಕಕ್ಕೆ ನೀಡಿರುವ ನೀರಿನ ಪ್ರಮಾಣದಲ್ಲಿಯೇ ಮೇಕೆದಾಟು ಯೋಜನೆಯನ್ನು ಕೈಗೊಳ್ಳುತ್ತಿದ್ದೇವೆ. ಅದನ್ನೇ ಡಿಪಿಆರ್ ಮಾಡಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಆದಷ್ಟು ಬೇಗ ಡಿಪಿಆರ್ಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಇದರಿಂದ ತಮಿಳುನಾಡಿಗೆ ಪ್ರತಿ ವರ್ಷ ಕಾವೇರಿ ನ್ಯಾಯಮಂಡಳಿ ಆದೇಶದಂತೆ ಬಿಡಬೇಕಾದ ನೀರಿನ ಪ್ರಮಾಣದಲ್ಲಿ ಯಾವುದೇ ಕೊರತೆಯಾಗುವುದಿಲ್ಲ. ಆದರೆ ಸಂಕಷ್ಟದ ವರ್ಷವನ್ನು ಹೊರತುಪಡಿಸಿ ಎಂದು ತಿಳಿಸಿದರು.

ಕೃಷ್ಣಾ ಕೊಳ್ಳದ ನ್ಯಾಯಮಂಡಳಿ ಆದೇಶವನ್ನು ಜಾರಿಗೆ ತರಲು ಮಹಾರಾಷ್ಟ್ರ ಹಾಗೂ ಕರ್ನಾಟಕ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಇಬ್ಬರು ನಾಯ್ಯಾಧೀಶರು ಹಿಂದೆ ಸರಿದಿರುವುದರಿಂದ ಹೊಸ ನ್ಯಾಯಾಧೀಶರ ನೇಮಕವಾಗಬೇಕಿದೆ. ಕೇಂದ್ರ ಸರ್ಕಾರವೂ ಸುಪ್ರೀಂ ಕೋರ್ಟ್ಗೆ ನೋಟಿಫಿಕೇಶನ್ ಹೊರಡಿಸುವ ಬಗ್ಗೆ ಅಫಿಡವಿಟ್ ಸಲ್ಲಿಸಿದೆ. ಆದಷ್ಟು ಬೇಗ ಈ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಮಾಡುವಂತೆ ಮನವಿ ಮಾಡಿದ್ದೇವೆ. ಅಲ್ಲದೇ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವಂತೆ ಮನವಿ ಮಾಡಿದ್ದು, ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ, ಕೃಷ್ಣಾ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರದಿಂದ ಹಣಕಾಸಿನ ನೆರವು ನೀಡುವಂತೆ ಕೇಳಿಕೊಂಡಿದ್ದಾಗಿ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button