ಸಣ್ಣ ವೈರತ್ವವೇ ಹರ್ಷ ಹತ್ಯೆಗೆ ಕಾರಣ: ಸಚಿವ ನಾರಾಯಣಗೌಡ

Bhajrangdal Activist Harsha Murder: ಶಿವಮೊಗ್ಗ: ಹತ್ಯೇಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಹಿಂದೆ ಯಾವುದೇ ಸಂಘಟನೆ ಪಾತ್ರ ಇಲ್ಲ. ಸಣ್ಣ ವೈರತ್ವವೇ ಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಹೇಳಿದ್ದಾರೆ.
ಸೋಮವಾರ ರಾತ್ರಿ ಹತ್ಯೆಗೀಡಾದ ಸಿಗೇಹಟ್ಟಿ ಹರ್ಷ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಹತ್ಯೆಗೀಡಾದ ಹರ್ಷ ಕುಟುಂಬಸ್ಥರಿಗೆ ಶೀಘ್ರವೇ ನ್ಯಾಯ ಒದಗಿಸುವ ಭರವಸೆ ನೀಡಿದರು. ಇದೇ ವೇಳೆ ಸಚಿವ ಡಾ.ನಾರಾಯಣಗೌಡ ಅವರು, ವೈಯಕ್ತಿಕವಾಗಿ ಒಂದು ಲಕ್ಷ ರೂ ನೆರವು ನೀಡಿದರು.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದ ತಕ್ಷಣ ಜಿಲ್ಲಾಧಿಕಾರಿ ಡಾ.ಸೆಲ್ವಾಮಣಿ, ಐಜಿ , ಎಸ್‌ಪಿ ಲಕ್ಷ್ಮೀ ಪ್ರಸಾದ್ ಅವರ ಜೊತೆ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ, ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಖುದ್ದುಇಲ್ಲೇ ಇದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತೇನೆ ಎಂದರು.
ಕಿಡಿಗೇಡಿಗಳಿಗೆ ತಕ್ಕಪಾಠ ಕಲಿಸುತ್ತೇವೆ
ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನಿಬ್ಬರ ಮೇಲೆ ಅನುಮಾನವಿದ್ದು,ಆ ಬಗ್ಗೆಯೂ ತನಿಖೆ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ತಣದಲ್ಲಿದ್ದು, ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಒಬ್ಬನೇ ಮಗ ಇದ್ದಿದ್ದು, ಅವರ ಕುಟುಂಬದ ನಾವು ಜೊತೆ ಇರ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ. ರಾಜ್ಯದ ಸಾಮರಸ್ಯ ಹಾಳು ಮಾಡುವ ಕಿಡಿಗೇಡಿಗಳ ಹೆಡೆಮುರಿ ಕಟ್ಟುತ್ತೇವೆ ಎಂದು ಹೇಳಿದರು.
