ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಧಾನಸಭೆಗೆ ಇಂದು ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಡಾ.ಅಜಯ್ ಸಿಂಗ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಲೆಯಲ್ಲೇ ರಾಜ್ಯದಲ್ಲಿ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರ ಡಿಎಪಿ ಗೊಬ್ಬರವನ್ನು ಶೇ.148ರಷ್ಟು ಕಡಿಮೆ ಮಾಡಿ 1200 ರೂಪಾಯಿಗೆ ರೈತರಿಗೆ ಮಾರಾಟ ಮಾಡುತ್ತಿದೆ. ನಮ್ಮ ರಾಜ್ಯದಲ್ಲೂ ಅದೇ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ ಎಂದು ತಿಳಿಸಿದರು.
ಈವರೆಗೆ 659 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಇತಿಹಾಸದಲ್ಲೇ ಗೊಬ್ಬರ ಮಾರಾಟಗಾರರ ವಿರುದ್ಧ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಕರಣ ದಾಖಲು ಮಾಡಿದೆ ನಿರ್ದರ್ಶನ ಇಲ್ಲ ಎಂದರು.
ರಸಗೊಬ್ಬರದ ಕೊರತೆ ಇಲ್ಲ:
ರಾಜ್ಯದ ಯಾವುದೇ ಪ್ರದೇಶದಲ್ಲಿ ರಸಗೊಬ್ಬರದ ಸಮಸ್ಯೆ ಅಥವಾ ಕೊರತೆ ಇದೆ ಎಂದು ತಿಳಿಸಿದರೆ ತಕ್ಷಣ ಅಗತ್ಯವಿರುವಷ್ಟು ಗೊಬ್ಬರವನ್ನು ಪೂರೈಸಲಾಗುವುದು ಎಂದು ಸಚಿವರು ಹೇಳಿದರು.
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಅಜಯ್ ಸಿಂಗ್ ಮತ್ತು ನಾಡಗೌಡ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ದೊರಕುತ್ತಿಲ್ಲ. ಹಲವು ಕಡೆ ಕಾಂಪ್ಲೆಕ್ಸ್ ಗೊಬ್ಬರದ ಅವಶ್ಯಕತೆ ಹೆಚ್ಚಾಗಿದೆ. ಅದು ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ರೈತರು ಕೊಂಡು ಕೊಳ್ಳುವ ಶಕ್ತಿ ಇಲ್ಲದೇ ಪರದಾಡುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
