ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಮಿತಿ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಜೆಟ್ ಘೋಷಣೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡಬೇಕು ಎಂದು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದೇನೆ. ಎಲ್ಲಾ ಇಲಾಖೆಗಳು ಹಣಕಾಸು ಇಲಾಖೆಯ ಜೊತೆ ಸಂಪರ್ಕದಲ್ಲಿರಬೇಕು. ಇಲಾಖೆಗಳ ನಡುವೆ ಸಂವಹನಕ್ಕೆ ಅನುಕೂಲವಾಗುವಂತೆ ಸಮಿತಿ ಕೆಲಸ ಮಾಡಲಿದೆ. ಮೊದಲ ಬಾರಿಗೆ ಸಮಿತಿ ರಚಿಸಲಾಗುತ್ತಿದೆ’ ಎಂದರು.
ಇದೇ ವೇಳೆ ಮಾತನಾಡಿದ ಬೊಮ್ಮಾಯಿ ಏ.1ರಂದು ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು ಅಂದು ಯಶಸ್ಸಿನಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ಜಾರಿಗೆ ತರಲು ಕ್ಷೀರಾಭಿವೃದ್ಧಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಇದರಿಂದ ರೈತರಿಗೆ ಆರ್ಥಿಕ ಸಹಾಯ ಸಿಗುತ್ತದೆ. ಏಪ್ರಿಲ್ 5 ರಂದು ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದರು.
