ವಾಯುಭಾರ ಕುಸಿತ; ಮಲೆನಾಡು-ಕರಾವಳಿಯಲ್ಲಿ ಆ.30ರವರೆಗೆ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ತೀರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಕಂಡಿದ್ದು ಆ.30ರವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ. ಈಗಾಗಲೇ ರಾಜ್ಯದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಆ. 30ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ 13 ಜಿಲ್ಲೆಗಳಲ್ಲಿ ಆ. 28 ಮತ್ತು 29ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 30ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.
ಈ ಬಾರಿ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಇಂದಿನಿಂದ ಆ. 30ರವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡು ಮತ್ತು ಕೇರಳ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯದಲ್ಲಿ ಕೂಡ ಭಾರೀ ಮಳೆಯಾಗಲಿದೆ.
