CITU PROTEST: ಕುಮಟಾದಲ್ಲಿ ಸಿಐಟಿಯು ಸಂಘಟನೆಯಿಂದ ಪ್ರತಿಭಟನೆ

ಕಾರವಾರ : ರೈತ ಸಂಘಟನೆಗಳು ನೀಡಿರುವ ಭಾರತ ಬಂದ್ ಕರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸಿಐಟಿಯು ನೇತೃತ್ವದಲ್ಲಿ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಕಛೇರಿ ಎದುರು ಬಹಿರಂಗ ಸಭೆ ನಡೆಸಿದರು.
ಸಂಯುಕ್ತ ಕಿಸಾನ ಮೋರ್ಚಾ ನೀಡಿರುವ ಭಾರತ್ ಬಂದ್ ಕರೆಗೆ ಕುಮಟಾದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಲ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದವು. ಸಿಐಟಿಯು ನೇತೃತ್ವದಲ್ಲಿ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು ಪಟ್ಟಣದ ಮಣಕಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ರಾಷ್ಟ್ರೀಯ ಹೆದ್ದಾರಿಯ ಮೂಲಕ ಗಿಬ್ ಸರ್ಕಲ್ ಮಾರ್ಗವಾಗಿ ತಹಶೀಲ್ದಾರ್ ಕಛೇರಿಯಲ್ಲಿ ಸಮಾವೇಶಗೊಳಿಸಿದರು.
ಅಲ್ಲಿ ಬಹಿರಂಗ ಸಭೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು. ಮೂರು ಕೃಷಿ ಕಾಯ್ದೆಗಳು, ವಿದ್ಯುತ್ ಮಸೂದೆ ರದ್ದತಿ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ, ಅಡುಗೆ ಅನಿಲ, ಡಿಸೇಲ್, ಪೆಟ್ರೋಲ್ ಸೇರಿದಂತೆ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಡಿಮೆಗೊಳಿಸಬೇಕು.ಭೂ ಮಸೂದೆ, ಕಾರ್ಮಿಕ ಕಾನೂನು ತಿದ್ದುಪಡಿ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಸಂಘಟನಾ ಕಾರ್ಯದರ್ಶಿ ಮಂಗಲಾ ಭಂಡಾರಿ, ಬಿಸಿಯೂಟ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಗಂಗಾ ನಾಯ್ಕ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲೂಕಾಧ್ಯಕ್ಷೆ ಸವಿತಾ ತನ್ಮಡಗಿ, ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.




