
ಬೆಳಗಾವಿ: ನವೆಂಬರ್ ಮೊದಲ ವಾರದಲ್ಲಿ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಆಗುವ ಬಗ್ಗೆ ಸುಳಿವು ಸಿಕ್ಕಿರುವ ಬೆನ್ನಲ್ಲೇ, ಶಾಸಕ ರಮೇಶ್ ಜಾರಕಿಹೊಳಿ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಈ ಸಲ ಶತಾಯಗತಾಯ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಜಾರಕಿಹೊಳಿ ಯೋಜನೆ ರೂಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳೆದ 3 ದಿನದಿಂದ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಇದ್ದಾರೆ. ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ. ಕೊಟ್ಟ ಮಾತಿನಂತೆ ಮತ್ತೆ ಸಚಿವ ಸ್ಥಾನವನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಮತ ತಂದಿದ್ದೇನೆ. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿಯನ್ನು ಗೆಲ್ಲಿಸ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಗೆಲುವಿಗೆ ಪ್ರಯತ್ನ ಮಾಡುತ್ತೇನೆ. ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಲ್ಲೂ ಪಕ್ಷ ಗೆಲುವಿಗೆ ಪ್ರಯತ್ನ ಮಾಡುತ್ತೇನೆ. ಈ ನಿಟ್ಟಿನಲ್ಲಿ ಸಚಿವ ಸ್ಥಾನ ನೀಡಿದ್ರೆ ಅನುಕೂಲವಾಗ್ತೆಂದು ಲಾಬಿ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.




