ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೃಹತ್ ಲಸಿಕಾ ಅಭಿಯಾನ ಸೆ.17ಕ್ಕೆ
ಚಿಕ್ಕಮಗಳೂರು: ಬೃಹತ್ ಲಸಿಕಾ ಅಭಿಯಾನವನ್ನು ಸೆ.17ರಂದು ಜಿಲ್ಲೆಯಾದ್ಯಂತ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮನೆ- ಮನೆಗೆ ಭೇಟಿ ಕೊಡುವುದು, ಲಸಿಕೆ ಪಡೆಯದ 18 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಲಸಿಕಾ ಕೇಂದ್ರಗಳಿಗೆ ಹಾಜರುಪಡಿಸಿ ಲಸಿಕೆ ನೀಡಲಾಗುತ್ತದೆ.
ಆರೋಗ್ಯ ಕ್ಷೇಮ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೀಕರಣ ನಡೆಯಲಿದೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರು ತಮ್ಮ ಕಚೇರಿ ಹಾಗೂ ತಾಲೂಕು ಕ್ಷೇತ್ರ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಲಸಿಕೆ ಪಡೆಯದಿರುವ ಕುರಿತು ಖಾತ್ರಿ ಪಡಿಸಿಕೊಳ್ಳಬೇಕು, ಅವರನ್ನು ಸೆಪ್ಟೆಂಬರ್ 17ರಂದು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಸುಮಾರು 75 ಸಾವಿರ ಜನರಿಗೆ ಲಸಿಕೆ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ದತೆ ಮಾಡಿಕೊಂಡಿದೆ.




