ಬೆಂಕಿ ಅವಘಟ: ಸುಟ್ಟು ಕರಕಲಾದ ಜೆಜೆಎಂ ಯೋಜನೆಯ ಪೈಪ್ಗಳು

ಧಾರವಾಡ: ಗ್ರಾಮದ ಪ್ರತಿಯೊಂದು ಮನೆಗಳಿಗೆ ಶುದ್ಧ ಕುಡಿಯುವ ನೀರು ಸಿಗಬೇಕು ಎಂಬ ನಿಟ್ಟಿನಲ್ಲಿ ಆರಂಭವಾಗಿರುವ ಜೆಜೆ ಎಂ ಯೋಜನೆಯ ಪೈಪ್ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಿಂದ ತಾಲೂಕಿನ ಹೆಬ್ಬಳ್ಳಿ ಗ್ರಾಮದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಾನಿಯಾಗಿದ್ದು ಸಾಕಷ್ಟು ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಗ್ರಾಮದ ಹೊರವಲಯ ಪ್ರವೇಶ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಗ್ರಾಮಕ್ಕೆ ಕುಡಿಯುವ ನೀರಿನ ಸಂಪರ್ಕ ನೀಡುವ ಜಲ ಜೀವನ ಮಿಷನ್ ಯೋಜನೆಯ ಪೈಪಗಳು ಬಹುತೇಕ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಪ್ಲಾಸ್ಟಿಕ್ ಮಿಶ್ರಿತ ಪೈಪ್ಗಲಾಗಿದ್ದರಿಂದ ಬೆಂಕಿಯು ವೇಗವಾಗಿ ಹರಡಿದ್ದು ಇದರಿಂದಾಗಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿದ್ದ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು ಕಟ್ಟಡಕ್ಕೂ ಹಾನಿಯಾಗಿದೆ.
ಬೆಂಕಿ ನೋಡಿದ ಸ್ಥಳೀಯರು ಪಂಚಾಯತಿ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದು ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕೊನೆಗೆ ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಬ್ಬಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭೀಮರೆಡ್ಡಿ ಚೌರೆಡ್ಡಿ ಹಾಗೂ ಪಂಚಾಯತಿ ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ತಾಲೂಕು ಪಂಚಾಯತಿ ಅಧಿಕಾರಿಗಳಿಗೆ, ಗ್ರಾಮೀಣ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಧಾರವಾಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.




