ಅಡುಗೆ ಅನಿಲ ಬೆಲೆ ಹೆಚ್ಚಳಕ್ಕೆ ಜೆಡಿಎಸ್ ಆಕ್ರೋಶ: ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ

ಧಾರವಾಡ: ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆ ಖಡಿಸಿ ಧಾರವಾಡದಲ್ಲಿ, ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನವಲಗುಂದ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ, ಹುಬ್ಬಳ್ಳಿ-ಧಾರವಾಡ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸಿಮರದ ನೇತೃತ್ವದಲ್ಲಿ, ಗೃಹ ಬಳಕೆ ಸಿಲಿಂಡರ್ ತೆಗೆದುಕೊಂಡು ಬಂದು ಪ್ರತಿಭಟನೆ ಮಾಡಿ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ ಜೆಡಿಎಸ್ ನಾಯಕರು, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದರು. ಈಗಾಗಲೇ ಕೋವಿಡ್‌ನಿಂದ ಜನ ತತ್ತರಿಸಿ ಹೋಗಿದ್ದಾರೆ. ಕೊರೊನಾ ಲಾಕ್ ಡೌನನಿಂದಾಗಿ ದೇಶದ ಜನತೆ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು ತಿಂಗಳದಲ್ಲಿ ಎರಡು ಮೂರು ಬಾರಿ ಏರಿಸುತ್ತಾ ಹೋದ್ರೆ ಜನರು ಜೀವನ ನಡೆಸುವುದು ಹೇಗೆ ಎಂದು ಪ್ರಶ್ನೆ ಮಾಡಿದರು.
ಈ ಕೂಡಲೇ ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆಯನ್ನು ಇಳಿಸಬೇಕು ಇಲ್ಲವಾದಲ್ಲಿ ಉಗ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು.




