ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ: ಮುಂದಿನ ಹೋರಾಟ ರೂಪುರೇಷೆಗೆ ನಾಳೆ ಜಮಖಂಡಿಯಲ್ಲಿ ಮಹತ್ವದ ಸಭೆ

ಬಾಗಲಕೋಟೆ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಲ್ಲಿ ರಾಜ್ಯ ಸರ್ಕಾರಕ್ಕೆ ಕೊಟ್ಟಿರುವ ಅಂತಿಮ ಗಡುವು ಮುಗಿದಿದ್ದು, ಮುಂದಿನ ಹೋರಾಟ ರೂಪುರೇಷೆ ಸಿದ್ಧತೆಗಾಗಿ ನಾಳೆ ಜಮಖಂಡಿಯಲ್ಲಿ ಸಭೆ ಕರೆಯಲಾಗಿದೆ ಎಂದು ಧರೆಪ್ಪ ಸಾಂಗಲಿಕರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 11ಕ್ಕೆ ಜಮಖಂಡಿ ನಗರದ ಬಸವ ಭವನದಲ್ಲಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸಾನಿಧ್ಯದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ. ಸಭೆಗೆ ಸಮಾಜದ ಹೆಚ್ಚಿನ ಸಂಖ್ಯೆಯ ಜನರು ಆಗಮಿಸಬೇಕು ಎಂದು ಕೋರಿದರು.
10ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 2ಎ ಮೀಸಲಾತಿ ಹೋರಾಟದ ವಿಚಾರವಾಗಿ ಸಮಾಜದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.
ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಬದಲಾಯಿಸುವ ಷಡ್ಯಂತ್ರ ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಆ ರೀತಿ ಯಾವುದೇ ಷಡ್ಯಂತ್ರ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸಮಾಜದ ಜನರು ಯಾವುದೇ ವದಂತಿಗೆ ಕಿವಿಗೊಡದೆ ಹೋರಾಟವನ್ನು ಬಲಗೊಳಿಸಿ ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ನಿಂಗಪ್ಪ ಕೋಟಿ,ಚೆನ್ನವೀರ ಅಂಗಡಿ, ಮಂಜುನಾಥ ಪುರ್ತಗೇರಿ ಇದ್ದರು.



