
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಒಂದೆರೆಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಪಕ್ಷದ ವರಿಷ್ಠರಿಗೆ ರವಾನಿಸಲಾಗಿದ್ದು, ಇಂದು ಸಂಜೆ ಅಥವಾ ಶುಕ್ರವಾರ ಪಟ್ಟಿ ಬಿಡುಗಡೆಯಾಗಬಹುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಕುರಿತಂತೆ ಚರ್ಚೆಯಾಗಿದೆ. ಈ ಚರ್ಚೆಯಂತೆ ಅಭ್ಯರ್ಥಿಗಳ ಪಟ್ಟಿ ಕೂಡ ಫೈನಲ್ ಮಾಡಲಾಗಿದ್ದು, ದೆಹಲಿಗೆ ರಾಜ್ಯಾಧ್ಯಕ್ಷರು ಪಟ್ಟಿಯನ್ನು ಕಳುಹಿಸಿ ಕೊಟ್ಟಿದ್ದಾರೆ ಎಂದರು.
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಕೊಪ್ಪಳದಿಂದ ಬಿಜೆಪಿ ಗ್ರಾಮಸ್ವರಾಜ್ ಯಾತ್ರೆ ಆರಂಭವಾಗಲಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಾಲ್ಕು ತಂಡಗಳು ರಾಜ್ಯಾದ್ಯಂತ ಯಾತ್ರೆ ನಡೆಸಲಿವೆ ಎಂದು ತಿಳಿಸಿದರು.
ಪ್ರತಿ ದಿನ ಎರಡು ಜಿಲ್ಲೆಗಳಲ್ಲಿ ಯಾತ್ರ ಕ್ರಮಿಸಲಿದ್ದು, ಚುನಾಯಿತ ಜನಪ್ರತಿನಿಧಿಗಳು ಹಾಗೂ ಮತದಾರರಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ ಎಂದರು.



