BSP : ರಾಜ್ಯ ಸರ್ಕಾರದ ವಿರುದ್ಧ ಬಿಎಸ್ ಪಿ ಪ್ರತಿಭಟನೆ

ದಾವಣಗೆರೆ: ಸಂವಿಧಾನದ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುವ ಸರ್ಕಾರಗಳು ಸಂವಿಧಾನಿಕವಾಗಿ ತಮ್ಮ ಜವಾಬ್ದಾರಿ ನಿರ್ವಹಿಸಲು ವಿಫಲವಾಗಿವೆ. ಜನರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಬಹುಜನ ಸಮಾಜ ಪಕ್ಷದ ದಾವಣಗೆರೆ ಜಿಲ್ಲಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಬಿಎಸ್ ಪಿ ಕಾರ್ಯಕರ್ತರು, ನಮ್ಮನ್ನು ಆಳುವ ಸರ್ಕಾರಗಳು ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಇದಲ್ಲದೇ ಪರಿಶಿಷ್ಠರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇದಲ್ಲದೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಫೋಟೋ ತೆಗೆದಿರಿಸಿ ಅವಮಾನ ಮಾಡಿದ ರಾಯಚೂರಿನ ಜಿಲ್ಲಾ ನ್ಯಾಯಾಧೀಶರ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾ ಮಾಡಬೇಕು. ಅಲ್ಲದೇ ಹುಮುನಾಬಾದ್ ತಹಶೀಲ್ದಾರ್ ಹಿರೇಮಠ್‍ರನ್ನು ಸೇವೆಯಿಂದ ಅಮಾನತು ಮಾಡಿ ಬಂಧಿಸಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸರ್ಕಾರಿ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದು ಅವರಿಗೆ ಸಾಗುವಳಿ ಚೀಟಿ ನೀಡಬೇಕು. ಸರ್ಕಾರಿ ಜಮೀನನಲ್ಲಿ ಮನೆ, ಗುಡಿಸಲು ಕಟ್ಟಿಕೊಂಡಿರುವ ಕುಟುಂಬಗಳಿಗೆ ಸಕ್ರಮ ಮಾಡಿಕೊಡಬೇಕು. ಗೋಮಾಳವನ್ನು ಖಾಸಗಿಯವರಿಗೆ ನೀಡಬಾರದು ಎಂದು ಆಗ್ರಹಿಸಿದರು.
