ದೇವನಹಳ್ಳಿ, ಶಾಲೆ ಮಕ್ಕಳು, ಶಿಕ್ಷಕರಿಗೆ ಕೋವಿಡ್; ಶಾಲೆಗೆ 7 ದಿನ ರಜೆ

ದೇವನಹಳ್ಳಿ: ಬೂದಿಗೆರೆಯ ಸರ್ಕಾರಿ ಶಾಲೆಯಲ್ಲಿ 21 ವಿದ್ಯಾರ್ಥಿಗಳ ಸಹಿತ ಇಬ್ಬರು ಶಿಕ್ಷಕರಿಗೆ ಕೋವಿಡ್ ಪಾಸಿಟೀವ್ ಪತ್ತೆಯಾಗಿದೆ. ಶಾಲೆಯನ್ನು ಕಂಟೈನ್ಮೆಂಟ್ ವಲಯವನ್ನಾಗಿ ಘೋಷಿಸಲಾಗಿದೆ. ಈ ಶಾಲೆಯಲ್ಲಿ ಒಟ್ಟು 90 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 23 ಪಾಸಿಟೀವ್ ಪತ್ತೆಯಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಸಂಜಯ್ ತಿಳಿಸಿದ್ದಾರೆ.
ದೇವನಹಳ್ಳಿ ಟೌನ್ ಸರ್ಕಾರಿ ಬಾಲಕರ ಶಾಲೆಯಲ್ಲಿ 100 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ 14 ವಿದ್ಯಾರ್ಥಿಗಳಿಗೆ ಪಾಸಿಟೀವ್ ಪತ್ತೆಯಾಗಿದೆ. ಆವತಿಯ ಗ್ರಾಮೀಣ ಸರ್ಕಾರಿ ಶಾಲೆಯಲ್ಲಿ 57 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಗಿ 12 ವಿದ್ಯಾರ್ಥಿಗಳಿಗೆ ಪಾಸಿಟೀವ್ ದೃಢಪಟ್ಟಿದೆ.
ಶಾಲೆಗಳಿಗೆ 7 ದಿನಗಳ ರಜೆ ನೀಡಲಾಗಿದೆ. ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಸಂಪರ್ಕಿತರಾದ ಅವರ ಪೋಷಕರನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಹಸೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ತಿಳಿಸಿದ್ದಾರೆ.
ಎಲ್ಲ ಸೋಂಕಿತರನ್ನು ಐಷೋಲೇಷನ್ಗೆ ಒಳಪಡಿಸಲು ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆರೋಗ್ಯದ ಮೇಲೆ ನಿಗಾ ಇಡಲು ತಜ್ಞ ವೈದ್ಯಕೀಯ ಸಿಬ್ಬಂದಿ ನೇಮಿಸಿದ್ದೇವೆ. ಸೋಂಕಿತರಿಗೆ ಅಗತ್ಯ ವೈದ್ಯಕೀಯ ಸಹಾಯ ಮಾಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.



