Latestಜಿಲ್ಲಾ ಸುದ್ದಿದಾವಣಗೆರೆ

ದಾವಣಗೆರೆ ಜಿಲ್ಲೆಯ ಕಡಲೆಕಾಳು ಬೆಳೆಗಾರರಿಗೆ ಸಿಹಿ ಸುದ್ದಿ

ದಾವಣಗೆರೆ: ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಕಡಲೆಕಾಳು ಖರೀದಿಗೆ ನೋಂದಣಿ ಕಾರ್ಯ ಫೆ. 18 ರಿಂದ ಪ್ರಾರಂಭಿಸಬೇಕು. ರೈತರಿಗೆ ಯಾವುದೇ ಗೊಂದಲವಾಗದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚಿಸಿದ್ದಾರೆ.

ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕಡಲೆಕಾಳಿಗೆ ಸರ್ಕಾರ ಪ್ರತಿ ಕ್ವಿಂಟಾಲ್‍ಗೆ 5230 ರೂ. ನಿಗದಿಪಡಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಕಡಲೆಕಾಳಿನ ಬೆಲೆ ಕುಸಿದಿದ್ದು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ರೈತರ ಹಿತಕಾಯಲು ಸರ್ಕಾರದ ವತಿಯಿಂದ ಜಿಲ್ಲೆಯಲ್ಲಿ ಕೂಡಲೇ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಫೆ. 18 ರಿಂದಲೇ ಜಗಳೂರು ಎಪಿಎಂಸಿ ಆವರಣದಲ್ಲಿ ರೈತರ ನೊಂದಣಿ ಕಾರ್ಯ ಪ್ರಾರಂಭಿಸಬೇಕು ಎಂದರು.

ನೋಂದಣಿಗೂ ಮುನ್ನ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿರಬೇಕು. ರೈತರು ಅವಸರ ಮಾಡಿ ಎಲ್ಲಿಯೂ ಕೂಡ ಬೇರೆ ಕಡೆಗೆ ಮಾರಾಟ ಮಾಡಿ ನಷ್ಟ ಅನುಭವಿಸುವುದು ಬೇಡ. ಜಗಳೂರು ಎಪಿಎಂಸಿ ಆವರಣದಲ್ಲಿನ ಖರೀದಿ ಕೇಂದ್ರದಲ್ಲಿಯೇ ಮಾರಾಟ ಮಾಡುವಂತೆ ರೈತರಲ್ಲಿ ಜಾಗೃತಿ ಮೂಡಿಸಬೇಕು. ಖರೀದಿ ಕೇಂದ್ರಕ್ಕೆ ಅವಶ್ಯಕವಿರುವ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಬೇಕು ಹಾಗೂ ಖರೀದಿಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಪೂರ್ವ ಸಿದ್ಧತೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button