
ಬೆಂಗಳೂರು: ಪ್ರೀತಿ ನಿರಾಕರಿಸಿದಳು ಎಂದು ಆಕ್ರೋಶದಿಂದ ಯುವಕ ಆಸಿಡ್ ಎರಚಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 24 ವರ್ಷದ ಯುವತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ನೀಡಿದ್ದಾರೆ.
ಎರಡು ದಿನಗಳ ಹಿಂದೆ ಸುಂಕದಕಟ್ಟೆ ಬಳಿ ಕೆಲಸಕ್ಕೆ ಹೊರಟಿದ್ದ ಯುವತಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಬಂದ ಆರೋಪಿ ನಾಗೇಶ್ ಯುವತಿ ಮೇಲೆ ಏಕಾಏಕಿ ಆಸಿಡ್ ಎರಚಿ ಪರಾರಿಯಾಗಿದ್ದ. ಆತನಿಗಾಗಿ ಬೆಂಗಳೂರು ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಈ ಮಧ್ಯೆ ನಗರದ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಆರೋಗ್ಯ ವಿಚಾರಿಸಲು ಇಂದು ಆರೋಗ್ಯ ಸಚಿವ ಡಾ ಸುಧಾಕರ್ ಭೇಟಿ ನೀಡಿದ್ದರು. ನಂತರ ಹೊರಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಸಂತ್ರಸ್ತೆಯ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ವೈಯಕ್ತಿಕವಾಗಿ ನಾನು 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇನೆ. ಸಂತ್ರಸ್ತ ಯುವತಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದರು.



