
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ, ಸಂಜೆಯೂ ಮಳೆಯಾಗಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ. ಹಾಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಬಿರುಸಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ.
ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒಡಿಶಾ, ಉತ್ತರಾಖಂಡ್, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಸಿಕ್ಕಿಂ, ಕೇರಳ, ಮೇಘಾಲಯ, ಬಿಹಾರ, ಲಕ್ಷದ್ವೀಪ, ತೆಲಂಗಾಣದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರಿಂದ ರಾಜ್ಯದ ಹಲವೆಡೆ ಮಳೆಯ ಆರ್ಭಟ ಹೆಚ್ಚಾಗಲಿದೆ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಸಮುದ್ರ ತೀರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ ಎನ್ನಾಗಿದೆ



