
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ವಿದೇಶಿಯರನ್ನು ಗುರುತಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲು ರಾಜ್ಯ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಇದಕ್ಕಾಗಿ ವಿಶೇಷ ಕಾರ್ಯಾಚರಣೆ ನಡೆಸಲು ಸೂಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಗುರುವಾರ ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಜೆಪಿಯ ಪಿ ಎಂ ಮುನಿರಾಜು ಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಅನಧಿಕೃತ ಹಾಗೂ ಅಕ್ರಮವಾಗಿ ನೆಲಸಿರುವ ವಿದೇಶಿ ಪ್ರಜೆಗಳನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.
“ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ವಿದೇಶಿಗರಿಗೆ ಆಧಾರ್ ಕಾರ್ಡ್ ಹಾಗೂ ಗುರಿತಿನ ಚೀಟಿ ಮಾಡಿಕೊಟ್ಟ ಒಂದು ಪ್ರಕರಣ ಬೆಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಒಬ್ಬ ವೈದ್ಯಾಧಿಕಾರಿಯನ್ನು ಅಮಾನತಿನಲ್ಲಿಡಲಾಗಿದೆ ಹಾಗೂ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತಿದೆ ಎಂದು ತಿಳಿಸಿದರು.
ಸದಸ್ಯರ ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಅಕ್ರಮವಾಗಿ ಯಾವುದೇ ಬಾಂಗ್ಲಾದೇಶಿ ನಾಗರಿಕರು ಅಥವಾ ರೋಹಿಂಗ್ಯಾ ಮುಸ್ಲಿಮರು, ಮಸೀದಿ ಅಥವಾ ಮದರಸಾಗಳಲ್ಲಿ ವಾಸವಾಗಿರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದರೆ ಅಕ್ರಮ ವಲಸಿಗರು ಆಶ್ರಯ ಪಡೆದಿರುವುದನ್ನು ನಿಯಂತ್ರಿಸಲು ಎಲ್ಲಾ ನಗರ ಮತ್ತು ಜಿಲ್ಲಾ ಮಟ್ಟದಲ್ಲಿ “ಸ್ಪೆಷಲ್ ಟಾಸ್ಕ್ ಫೋರ್ಸ್” ರಚಿಸಿದ್ದು, ಈ ಬಗ್ಗೆ, ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸ್ಥಳೀಯ ಪೊಲೀಸರು ಮತ್ತು ಸ್ಪೆಷಲ್ ಟಾಸ್ಕ್ ಫೋರ್ಸ್ ಸಿಬ್ಬಂದಿಯವರು ನಿರಂತರವಾಗಿ ಕಾರ್ಯಪ್ರವೃತ್ತರಾಗಿಗಿದ್ದಾರೆ ಎಂದರು.
ರಾಜ್ಯದಲ್ಲಿ ಅಕ್ರಮ ವಲಸಿಗರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಬೆಂಗಳೂರು ನಗರದಲ್ಲಿ ಒಬ್ಬರು ಹಾಗೂ ಕೆ ಜಿ ಎಫ್ ಪಟ್ಟಣದಲ್ಲಿ ಒಬ್ಬರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದರು.
ಸದಸ್ಯರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಅಕ್ರಮ ವಲಸಿಗರು ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸದೆ ದೇಶ ತೊರೆದಿರುವ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ತಿಳಿಸಿದರು.



