2023 ರಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

ಹುಬ್ಬಳ್ಳಿ: 2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೆ ನನ್ನ ಗುರಿಯಾಗಿದೆ. ಅದಕ್ಕೆ ಬೇಕಾದ ಅಗತ್ಯ ತಯಾರಿಯನ್ನು 2022ರಿಂದಲೇ ಸಿದ್ಧತೆಗಳನ್ನು ಆರಂಭ ಮಾಡುತ್ತೇನೆ. ವರ್ಷದ 365 ದಿನಗಳು, 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿ ಮತ್ತೆ 2023 ಕ್ಕೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲು ಬಂದಿದ್ದೇನೆ. ಸಭೆಯಲ್ಲಿ ಪಕ್ಷದ ಸಂಘಟನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತದೆ. ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಲ್ಲ:
ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನಾನು ಪ್ರತಿಕ್ರಿಯೇ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತದೆ ಎಂದರು.
ಸಿಎಂ ವಿಶ್ರಾಂತಿ ಪಡೆದು ಕೆಲಸ ಮಾಡಲಿ ಎನ್ನುವ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಎಂ.ಪಿ ಕುಮಾರಸ್ವಾಮಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ವರ್ಷಪೂರ್ತಿ ದಿನಾಲು 15 ಗಂಟೆ ಕೆಲಸ ಮಾಡುವ ಮೂಲಕ ಜನತೆಗೆ ಉತ್ತಮ ಆಡಳಿತ ನೀಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ನಾಯಕರು ನಮ್ಮ ಮೇಲೆ ವಿಶ್ವಾಸ ಇಟ್ಟು ಹೇಳಿದ್ದಾರೆ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ.
ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎನ್ನುವ ಅರುಣ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅರುಣ್ ಸಿಂಗ್ ಸೇರಿದಂತೆ ಕೇಂದ್ರದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳುತ್ತೇನೆ. ನಾವು ನಮ್ಮದೇ ಆದ ತಂಡ ಇದೆ. ನಾವೆಲ್ಲಾ ಸೇರಿ ಸಾಮೂಹಿಕವಾಗಿ ಮುಂಬರುವ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.
ಇನ್ನೂ ಬಿಡಿಎ ಭ್ರಷ್ಟಾಚಾರದ ಎಸಿಬಿ ಕೇಸ್ ವಿಚಾರವಾಗಿ ಮಾತನಾಡಿದ ಅವರು, ಕೆಲವೊಂದು ಅಂತರಿಕ ಪ್ರಸ್ತಾವನೆ ಕೇಳಿದ್ದಾರೆ. ಅನುಮತಿ ಸಿಕ್ಕ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.



