
ದಾವಣಗೆರೆ: ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಅವರಿಗೆ ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ರೇಣುಕಾಚಾರ್ಯ ಅವರು ಯಡಿಯೂರಪ್ಪ ಹಾಗೂ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದರು. ಆದ್ರೆ ಸಚಿವ ಸ್ಥಾನ ಸಿಗದಿದ್ದರೂ ಈ ಹಿಂದೆ ನೀಡಿದ್ದ ಹುದ್ದೆ ನೀಡಲಾಗಿದೆ.
ಈ ಹಿಂದೆ ಬಿ. ಎಸ್. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಪಡೆದಿದ್ದ ರೇಣುಕಾಚಾರ್ಯ ಅವರು ಈಗ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಿದ್ದಾರೆ.
ಬಿ.ಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಿದ್ದ ನನ್ನನ್ನು ಮತ್ತೆ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿರುವ ಬಿಜೆಪಿ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯಾಧ್ಯಕ್ಷರಿಗೆ ತುಂಬು ಹೃದಯದ ಕೃತಜ್ಞತೆ ಅರ್ಪಿಸುತ್ತೇನೆ.
ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಮಾರ್ಗದರ್ಶನದಲ್ಲಿ “ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು” ಎಂಬ ದೂರದೃಷ್ಟಿಯಲ್ಲಿ ಸರ್ವಜನಾಂಗದ ಹಿತಕ್ಕಾಗಿ ಹಗಲಿರುಳು ನಿಷ್ಠೆಯಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.



