ಫೆ.14 ರಿಂದ ಶಾಲೆ ಆರಂಭ : ಶಿಕ್ಷಣ ಸಂಸ್ಥೆಗಳಲ್ಲಿ ಮೊಬೈಲ್ ನಿಷೇಧ

ದಾವಣಗೆರೆ : ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಫೆ. 14ರಿಂದ 15ರವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿಂದು ನಡೆದ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಫೆ.14 ರ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಮಂಗಳವಾರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲೆ ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಮಾಡಲಾಗಿದೆ ಎಂದರು.
ಸರ್ಕಾರದ ಆದೇಶದಂತೆ ಸೋಮವಾರ ಒಂಬತ್ತು ಮತ್ತು ಹತ್ತನೇ ತರಗತಿ ಮಾತ್ರ ಆರಂಭಿಸಲಾಗುವುದು. ಮುಂದಿನ ತರಗತಿಗಳ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಹೈಕೋರ್ಟ್ ಮಧ್ಯಂತರ ಆದೇಶದ ಪಾಲನೆ ಜೊತೆಗೆ ಶಾಲೆಗಳು ಆರಂಭವಾಗಲಿವೆ.
ನಾಳೆ ಸಂಜೆಯೊಳಗೆ ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಪಾಲಕರ ಸಭೆ ಮಾಡುವುದು ಕಡ್ಡಾಯವಾಗಿದೆ. ಶಾಲಾ ಕಾಲೇಜುಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ 112 ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಬಹುದು. ಪ್ರತಿಯೊಂದು ಶಿಕ್ಷಣ ಸಂಸ್ಥೆಯವರು ಕಡ್ಡಾಯವಾಗಿ ಪಾಲಕರ ಸಭೆ ಮಾಡಬೇಕು ಎಂದು ಸೂಚನೆ ನೀಡಿದರು. ಸಭೆಯ ವಿವರದ ಬಗ್ಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.



