ಭಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್ : ಇಬ್ಬರು ಆರೋಪಿಗಳ ಬಂಧನ: ಎಸ್ ಮುರುಗನ್

ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಎಡಿಜಿಪಿ ಎಸ್.ಮುರುಗನ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣ ಸಂಬಂಧ ತನಿಖೆಗಾಗಿ ನಾಲ್ಕು ತಂಡವನ್ನು ರಚಿಸಲಾಗಿದೆ. ಈ ಕೊಲೆಯನ್ನು ಯಾರು ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು.
ಕಾನೂನು ಸುವ್ಯವಸ್ಥೆ ಹದಗೆಡುವುದಕ್ಕೆ ಪೊಲೀಸರು ಬಿಡುವುದಿಲ್ಲ. ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟ ಉಂಟುಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣ ಸಂಬಂಧ ಆಸ್ತಿ-ಪಾಸ್ತಿಗೆ ಹಾನಿ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗುತ್ತದೆ. ಹರ್ಷನ ಕೊಲೆ ಪ್ರಕರಣದಲ್ಲಿ ಒಂದು ಕೇಸ್ ದಾಖಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾತನಾಡಿ, ನಗರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಎಲ್ಲಾ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಎಡಿಜಿಪಿಯವರೇ ಖುದ್ಧು ಮುಂದೆ ನಿಂತು ಕ್ರಮ ಕೈಗೊಳ್ಳುತ್ತಿದ್ದಾರೆ. ಆದಷ್ಟು ಬೇಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ಬರಲಿದೆ ಎಂದು ತಿಳಿಸಿದರು.
