
ಬೆಂಗಳೂರು: ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ಕೇಸರಿ ದಿರಿಸು ತೊಟ್ಟ ಪೊಲೀಸರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ ಈ ಕುರಿತು ಪೋಸ್ಟ್ ಮಾಡಿದ್ದಾರೆ. ಒಂದೆಡೆ ಅಮಾಯಕ ಯುವಕ- ಯುವತಿಯರ ಮೇಲೆ ಅನೈತಿಕ ಪೊಲೀಸ್‌ಗಿರಿಯ ದೌರ್ಜನ್ಯ…. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ…. ಇದಕ್ಕೆಲ್ಲ ಮುಖ್ಯಮಂತ್ರಿಗಳ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ಮುಖ್ಯಮಂತ್ರಿಗಳು ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ, ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ ಎಂದಿದ್ದಾರೆ.
ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ ಮುಖ್ಯಮಂತ್ರಿಗಳೇ. ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ಆಗ್ರಹಿಸಿದ್ದಾರೆ.



