Latestಉತ್ತರ ಕನ್ನಡ

ಉತ್ತರ ಕನ್ನಡ : ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಕಾರವಾರ : ಜಿಲ್ಲೆಯಲ್ಲಿ ಏಕಾಏಕಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.ಅದರಲ್ಲಿಯೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ವಸತಿ ಶಾಲೆಗಳು ಕೊರೋನಾ ಕ್ಲಸ್ಟರ್‌ಗಳಾಗುವ ಆತಂಕ ಎದುರಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಶೇ.0.28 ಕ್ಕೆ ತಲುಪಿದ್ದ ಕೋವಿಡ್​​ ಪಾಸಿಟಿವಿಟಿ ದರ ಕಳೆದ ಒಂದು ವಾರದಲ್ಲೇ ಏರಿಕೆಯಾಗಿ 0.75 ಕ್ಕೆ ತಲುಪಿದೆ. ಸದ್ಯ 121 ಸಕ್ರೀಯ ಪ್ರಕರಣಗಳಿದ್ದು, ನಿತ್ಯ 20 ಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಬಳಿಕ ಜೊಯಿಡಾ ತಾಲೂಕಿನ ರಾಮನಗರದ ರಾಣಿ ಚೆನ್ನಮ್ಮ ವಸತಿ ಶಾಲೆಯ 60 ವಿದ್ಯಾರ್ಥಿನಿಯರ ಪೈಕಿ 19 ವಿದ್ಯಾರ್ಥಿನಿಯರಲ್ಲಿ ಸೋಂಕು ಪತ್ತೆಯಾಗಿತ್ತು. ಈಗ 30 ವಿದ್ಯಾರ್ಥಿಗಳಿಗೆ ವ್ಯಾಪಿಸಿದೆ. ಈ ನಿಟ್ಟಿನಲ್ಲಿ ವಸತಿ ಶಾಲೆಯನ್ನು ಕೊರೋನಾ ಕ್ಲಸ್ಟರ್ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೇ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.

ಇನ್ನುಳಿದಂತೆ ಶಾಲೆ,ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಮುಂಜಾಗ್ರತೆ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿ,ಶಾಲೆ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಕೊರೋನಾ ಮುಂಜಾಗ್ರತಾ ಕ್ರಮ ಪಾಲಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಕೇಂದ್ರ ಸರ್ಕಾರ ಜ.3 ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಹಾಗೂ ಆದ್ಯತಾ ವಲಯದವರಿಗೆ ಬೂಸ್ಟರ್ ಡೋಸ್ ನೀಡಲು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ವಿತರಣೆಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಜಿಲ್ಲೆಯಲ್ಲಿ 15 ರಿಂದ 18 ವರ್ಷದ 70 ಸಾವಿರದಿಂದ 75 ಸಾವಿರ ಮಕ್ಕಳಿದ್ದಾರೆ ಎಂದು ಅಂದಾಜಿಸಲಾಗಿದೆ.

ಆದ್ಯತಾ ವಲಯದಲ್ಲಿರುವ 77,302 ಮಂದಿಗೆ ಲಸಿಕೆ ನೀಡಲಾಗುತ್ತದೆ.ಇವರಲ್ಲಿ 15,284 ಆರೋಗ್ಯ ಕಾರ್ಯಕರ್ತರು,10,997 ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲಿನ ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 51,021 ಮಂದಿ ಸೇರಿದ್ದಾರೆ.

ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 60 ವರ್ಷಕ್ಕಿಂತ ಮೇಲಿನವರಿಗೆ ಜ.10 ರಿಂದ ಬೂಸ್ಟರ್ ಡೋಸ್ ಕೊಡಲಾಗುವುದು.ಅದೇ ರೀತಿ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಮುಂಚೂಣಿ ಕಾರ್ಯಕರ್ತರಿಗೂ ಲಸಿಕೆ ನೀಡಲಾಗುತ್ತದೆ ಎಂದು ಆರ್​​ಸಿಹೆಚ್​​ಓ ಡಾ.ರಮೇಶ ರಾವ್ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button