
ನವದೆಹಲಿ: ಹೊಸದಿಲ್ಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಮಾಂಸಾಹಾರದ ವಿಚಾರದಲ್ಲಿ ರಾಮನವಮಿ ಸಂದರ್ಭದಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಯ ಅಪರಿಚಿತ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಗಲಾಟೆಯಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು, ಹಾಗೂ ಅವರನ್ನು ನಂತರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಜೆಎನ್ಯು ವಿದ್ಯಾರ್ಥಿ ಸಂಘ, ಭಾರತೀಯ ವಿದ್ಯಾರ್ಥಿ ಒಕ್ಕೂಟ, ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸೆಯೇಷನ್ನ ಸದಸ್ಯರಾದ ವಿದ್ಯಾರ್ಥಿಗಳಿಂದ ದೂರು ಸ್ವೀಕರಿಸಲಾಗಿದೆ ಹಾಗೂ ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಕಲಂ 323, 341, 509, 506 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




