
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಅರುಣ್ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜಸ್ಟಿಸ್ ಅರುಣ ಮಿಶ್ರಾ 2020ರ ಸೆಪ್ಟೆಂಬರ್ 3ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದರು.
ಜಸ್ಟಿಸ್ ಅರುಣ್ ಮಿಶ್ರಾ 2014ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ, ರಾಜಸ್ಥಾನ ಮತ್ತು ಕಲ್ಕತ್ತಾ ಹೈಕೋರ್ಟ್ ಗಳ ಮುಖ್ಯನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು. ಜಸ್ಟಿಸ್ ಮಿಶ್ರಾ ಅವರ ಈಗಿನ ಹೊಸ ಹುದ್ದೆಯ ಅಧಿಕಾರಾವಧಿಯು 5 ವರ್ಷದ್ದಾಗಿದು 2026 ರಲ್ಲಿ ನಿವೃತ್ತರಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಸಭೆಯ ಉಪಾಧ್ಯಕ್ಷ ಹರಿವಂಶ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯು ಅರುಣ್ ಮಿಶ್ರಾ ಅವರನ್ನು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಜಸ್ಟಿಸ್ ಅರುಣ್ ಮಿಶ್ರಾ ಆಯ್ಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಎಸ್‌ಸಿ, ಎಸ್ಟಿ ಸಮುದಾಯದ ವ್ಯಕ್ತಿಯೊಬ್ಬರನ್ನು ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಮಾಡುವಂತೆ ಮನವಿ ಮಾಡಿದ್ದಾರೆ. ಇಲ್ಲವೇ ಎಸ್‌ಸಿ, ಎಸ್ಟಿ ಸಮುದಾಯದಕ್ಕೆ ಸೇರಿದವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸದಸ್ಯರನ್ನಾಗಿ ನೇಮಿಸಬೇಕು, ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮನವಿ ಮಾಡಿದ್ದಾರೆ.
ಮೂಲಗಳು ಪ್ರಕಾರ ಮಲ್ಲಿಕಾರ್ಜುನ ಖರ್ಗೆಯವರು ಸಮಿತಿಯ ಸಭೆಗೂ ಮೊದಲೇ ಪ್ರಧಾನಿಯವರಿಗೆ ಈ ಬಗ್ಗೆ ಪತ್ರವನ್ನು ಬರೆದಿದ್ದರು.
ಇತ್ತೀಚಿನ ವರ್ಷಗಳಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಆ ಸಂಬಂಧ ಹೆಚ್ಚು ಹೆಚ್ಚು ಪ್ರಕರಣಗಳು ಮಾನವ ಹಕ್ಕು ಆಯೋಗಕ್ಕೆ ಬರುತ್ತಿವೆ ಹಾಗಾಗಿ ಎಸ್‌ಸಿ ಎಸ್ಟಿ ಸಮುದಾಯದವರು ಆಯೋಗದಲ್ಲಿದ್ದರೆ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.




